ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಒಂದು ವಾರದಿಂದ ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳ ಕಾಲ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗು ದಕ್ಷಿಣ ಒಳನಾಡಿನ ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗು ಸಹಿತ ಚದುರಿದ ಭಾರೀ ಮಳೆಯು ಸಂಭವಿಸುವ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮತ್ತು ಒಳ ಕರ್ನಾಟಕದ ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.
ಮೀನುಗಾರರರಿಗೆ ಎಚ್ಚರಿಕೆ: ತೀವ್ರ ಬಿರುಗಾಳಿ 45 ರಿಂದ 55 ಕಿಮೀ ವೇಗದಲ್ಲಿ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.