ಗ್ಯಾರಂಟಿ ಯೋಜನೆಗಳಿಗೆ ನಿರ್ಬಂಧ ವಿಧಿಸಲು ಕೋರಿಕೆ: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಗ್ಯಾರಂಟಿ ಆಮಿಷಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ 3 ತಿಂಗಳ ಕಾಲ ಮುಂದೂಡಿದೆ.
ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಚುನಾವಣೆಯ ವೇಳೆ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಉಡುಗೊರೆಗಳ ಪ್ರಕರಣವು ಸುಪ್ರೀಂ ಕೋರ್ಟ್ ಪರಿಗಣನೆಯಲ್ಲಿದೆ ಎಂದಿರುವ ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು 3 ತಿಂಗಳ ಕಾಲ ಮುಂದೂಡಿತು.
ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಪೀಠವು ಸದ್ಯ ಪ್ರಕರಣವು ಸುಪ್ರೀಂ ಕೋರ್ಟ್ ಮುಂದಿದೆ. ನಾವು ಈಗ ಪ್ರತಿವಾದಿಗಳಿಗೆ ನೋಟಿಸ್ ಸಹ ಜಾರಿ ಮಾಡುವುದಿಲ್ಲ. ಸುಪ್ರೀಂಕೋರ್ಟ್‍ನಲ್ಲಿ ಏನಾಗುತ್ತದೋ ನೋಡೋಣ. ವಿಚಾರಣೆಯನ್ನು 12 ವಾರಗಳ ಕಾಲ ಮುಂದೂಡಲಾಗುವುದು ಎಂದಿತು.
ಜನರ ತೆರಿಗೆ ಹಣವನ್ನು ಅಧಿಕಾರ ಲಾಲಸೆಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಬೊಕ್ಕಸದ ಹಣ ಬಳಸುವ ಬದಲು ಆಮಿಷಕ್ಕೆ ಬಳಕೆ ಮಾಡಲಾಗುತ್ತಿದೆ. ಮತದಾರರಿಗೆ ಪ್ರಲೋಭನೆ ಒಡ್ಡಿ ಮತ ಕೇಳುವುದು ಸಂವಿಧಾನಬಾಹಿರ ಹಾಗೂ ಜನಪ್ರತಿನಿಧಿಗಳ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಹೀಗಾಗಿ, ಸೂಕ್ತ ಮಾರ್ಗಸೂಚಿ ರೂಪಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.