ವಿಮಾನ ನಿಲ್ದಾಣಗಳಿಗೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಹೆಸರಿಡಲು ಪರಿಶೀಲನೆ: ಸಚಿವ ಎಚ್.ಕೆ.ಪಾಟೀಲ್
ಬೆಳಗಾವಿ: ರಾಜ್ಯದ ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೆಸರನ್ನು ಇಡಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಎಚ್.ಕೆ.ಪಾಟೀಲ್ ಭರವಸೆ ನೀಡಿದ್ದಾರೆ.
ಬುಧವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯ ಕೋನರೆಡ್ಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ‘ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಇತಿಹಾಸ ಪುರುಷರ ಹೆಸರನ್ನು ಇರಿಸುವ ವಿಚಾರದಲ್ಲಿ ಸರಕಾರ ಸಕಾರಾತ್ಮಕವಾಗಿದೆ. ಸದಸ್ಯರ ಒತ್ತಾಯದಂತೆ ಎಲ್ಲರೂ ಒಪ್ಪಿ ಸದನ ಸರ್ವಾನುಮತದ ನಿರ್ಣಯ ಕೈಗೊಂಡರೂ ಸ್ವಾಗತಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಕೋನರೆಡ್ಡಿ, ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೆಸರನ್ನು ಇರಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಬಿಜೆಪಿ ಸದಸ್ಯ ಅರವಿಂದ ಬೆಲ್ಲದ್ ಧ್ವನಿಗೂಡಿಸಿದರು.