ಲೈಂಗಿಕ ದೌರ್ಜನ್ಯ ಪ್ರಕರಣ | ನಿರೀಕ್ಷಣಾ ಜಾಮೀನು ಕೋರಿ ಎಚ್.ಡಿ.ರೇವಣ್ಣ ಕೋರ್ಟ್ ಮೊರೆ
ಎಚ್.ಡಿ.ರೇವಣ್ಣ
ಬೆಂಗಳೂರು : ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಸಂಬಂಧ ಆರೋಪಿ ಎಚ್ ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಎಸ್ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್ಗೆ ನೋಟಿಸ್ ಜಾರಿ ಮಾಡಿದೆ.
ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಪ್ರಜ್ವಲ್ ರೇವಣ್ಣ ಮತ್ತು ತಂದೆ ಎಚ್ಡಿ ರೇವಣ್ಣ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇನ್ನು ಈ ಪ್ರಕರಣದಲ್ಲಿ ಎಚ್ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ, ಪುತ್ರ ಎ2 ಆರೋಪಿಯಾಗಿದ್ದಾರೆ. ಇನ್ನು ಈ ಪ್ರಕರಣದ ಎಸ್ಐಟಿ ತನಿಖೆ ನಡೆಸಿದ್ದು, ಈಗಾಗಲೇ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಹೀಗಾಗಿ ಕೋರ್ಟ್ ಮೊರೆಹೋಗಿದ್ದಾರೆ.