ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿ 3 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಳ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರೈತರಿಗೆ ಶೂನ್ಯ ಬಡ್ಡಿದರಲ್ಲಿ ನೀಡುತ್ತಿರುವ ಅಲ್ಪಾವಧಿಯ ಸಾಲದ ಮಿತಿಯನ್ನು 3 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಏರಿಸಲಾಗುವುದು. ಅದೇ ರೀತಿ ಶೇ.3ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ.ರೂ. ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಹಾಗೂ ಪರಿಕರಗಳ ಸಾಗಣೆಗಾಗಿ 4 ಚಕ್ರದ ಪಿಕ್ ಅಪ್ ವ್ಯಾನ್ ಖರೀದಿಸಲು 7 ಲಕ್ಷ ರೂ. ತನಕ ಸಾಲವನ್ನು ಶೇ.4ರ ಬಡ್ಡಿ ದರಲ್ಲಿ ವಿತರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಸರಕಾರವು ರೈತ ವಿರೋಧಿ ಕಾಯ್ದೆ ಎ.ಪಿ.ಎಂ.ಸಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಕಾಯಕ ನಿಧಿ ಯೋಜನೆಯಡಿ ರಾಜ್ಯದ ಕೃಷಿಮಾರುಕಟ್ಡೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮೃತಪಟ್ಟರೆ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10 ಸಾವಿರ ರೂ.ನಿಂದ 25, ಸಾವಿರ ರೂ. ತನಕ ಹೆಚ್ಚಿಸಲಾಗುವುದು ಎಂದರು.