ರಾಜ್ಯದಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ 16,500 ವೈದ್ಯಕೀಯ ಸಿಬ್ಬಂದಿ ಹುದ್ದೆಗಳು ಖಾಲಿ ಇರುವುದು ಹಾಗೂ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಕೊರತೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಂಬಂಧ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆದೇಶಿಸಿದೆ.
ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ದಾಖಲಿಸಿಕೊಂಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಜ್ಯ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಪ್ರಕರಣವೇನು?: ಭಾರತೀಯ ವಾಣಿಜ್ಯೋದ್ಯಮ ಮಹಾ ಸಂಘಗಳ ಒಕ್ಕೂಟ 2023ರ ಅ.11ರಂದು ಕರ್ನಾಟಕ ವಿಷನ್ ಅಡಿ 1 ಟ್ರಿಲಿಯನ್ ಆರ್ಥಿಕತೆ ವರದಿ ಬಿಡುಗಡೆ ಮಾಡಿತ್ತು. ಈ ವರದಿಯಲ್ಲಿ 454 ಗ್ರಾಮೀಣ ಭಾಗದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಇದರಿಂದ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆ ಲಭ್ಯವಾಗಬೇಕಿದೆ. ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಶ್ರೂಷಕಿಯರು, 1,517 ಲ್ಯಾಬ್ ಟೆಕ್ನಿಷಿಯನ್ಸ್, 1,517 ಫಾರ್ಮಸಿ ಸಿಬ್ಬಂದಿ, 1752 ಸಹಾಯಕರು, 3253 ಗ್ರೂಪ್ ಡಿ ನೌಕರರು ಸೇರಿ ಹಲವು ಸಿಬ್ಬಂದಿ ಕೊರತೆಯಿದೆ ಎಂದು ಪ್ರಕಟವಾಗಿದೆ.
ಇದರಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಅರ್ಜಿ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‍ಗೆ ಸೂಚನೆ ನೀಡಿತ್ತು.
ಅಲ್ಲದೇ, ರಾಜ್ಯದಲ್ಲಿ ಮಂಜೂರಾಗಿರುವ ಎಲ್ಲ ವೃದ್ಯಕೀಯ ಸಿಬ್ಬಂದಿ ಭರ್ತಿ ಮಾಡಬೇಕು. ಜೊತೆಗೆ, ಅಗತ್ಯ ವೈದ್ಯಕೀಯ ಪರಿಕರಗಳನ್ನು ಖರೀದಿ ಮಾಡುವುದಕ್ಕೆ ಬಜೆಟ್‍ನಲ್ಲಿ ಹಣ ಮೀಸಲಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅಲ್ಲದೇ, ಗ್ರಾಮೀಣ ಭಾಗಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಳವಾಗುತ್ತಿದ್ದು, ವೈದ್ಯರ ಕೊರತೆಯಿಂದ ಗ್ರಾಮಗಳ ಜನ ಸಂಕಷ್ಟಕ್ಕೆ ಸಿಲುಕುವಂತಾಗಲಿದೆ. ಹೀಗಾಗಿ, ಸಿಬ್ಬಂದಿ ನೇಮಕ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.