ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು : ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ
ಸಿದ್ದರಾಮಯ್ಯ(PTI)/ಕೆ.ಬಿ.ಕೋಳಿವಾಡ
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ನ ಹಿರಿಯ ಮುಖಂಡ ಕೆ.ಬಿ.ಕೋಳಿವಾಡ ಆಗ್ರಹಿಸುವ ಮೂಲಕ ಪಕ್ಷದ ಮುಖಂಡರನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿರುವ ಅವರು, ವಿವಿಧ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ಮುಖ್ಯಮಂತ್ರಿಗಳ ವಿಚಾರವನ್ನು ವಿಪಕ್ಷಗಳು ಪ್ರಸ್ತಾಪಿಸುತ್ತಿವೆ. ಇದು ಪಕ್ಷಕ್ಕೆ ತೀವ್ರ ಮುಜುಗರ ತರುತ್ತಿದೆ. ಹಾಗಾಗಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
‘ಮುಡಾ ಪ್ರಕರಣದಲ್ಲಿ ತನಿಖೆ ಎದುರಿಸಿ ಮುಖ್ಯಮಂತ್ರಿಗಳು ನಿಷ್ಕಳಂಕಿತರು ಎಂದು ಸಾಬೀತಾದ ನಂತರ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಎನ್ನುತ್ತಿರುವುದು ಅವರ ಅಭಿಪ್ರಾಯ, ಅವರು ರಾಜೀನಾಮೆ ಕೊಡಬೇಕೆಂಬುದು ನಮ್ಮ ಅಭಿಪ್ರಾಯ ಎಂದು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಹಾಗೂ ನನಗೆ ಈ ಹಿಂದೆ ಭಿನ್ನಾಭಿಪ್ರಾಯವಿತ್ತು. ಆದರೆ, ಇದೀಗ ನಾವು ಆತ್ಮೀಯವಾಗಿದ್ದೇವೆ. ಅದೇನೇ ಇರಲಿ ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಅವರು ರಾಜೀನಾಮೆ ಕೊಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಕೋಳಿವಾಡ ಇದೇ ವೇಳೆ ಸ್ಪಷ್ಟಪಡಿಸಿದರು.