ಪ್ರಜ್ವಲ್ ರೇವಣ್ಣ ವಿರುದ್ಧ 113 ಸಾಕ್ಷಿ, 1,652 ಪುಟಗಳ ಮತ್ತೊಂದು ಚಾರ್ಜ್‍ಶೀಟ್ ಸಲ್ಲಿಕೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 113 ಸಾಕ್ಷಿಗಳನ್ನು ಒಳಗೊಂಡ 1,652 ಪುಟಗಳ ಚಾರ್ಜ್‍ಶೀಟ್ ಅನ್ನು ಎಸ್‍ಐಟಿ ಅಧಿಕಾರಿಗಳು ನಗರದ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ತನಿಖಾಧಿಕಾರಿ ಶೋಭಾ ಅವರ ನೇತೃತ್ವದಲ್ಲಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲಾಗಿದ್ದು, ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಇತ್ತೀಗೆಚೆ ಎಸ್‍ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಒಳಗೊಂಡ ಸುಮಾರು 2 ಸಾವಿರ ಪುಟಗಳ ಚಾರ್ಜ್‍ಶೀಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ಸಲ್ಲಿಸಿದ್ದರು. ಇದೀಗ ಸೋಮವಾರದಂದು ಎರಡನೇ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಎಸ್‍ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸದ್ಯ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 30ರಂದು ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಜ್ವಲ್ ರೇವಣ್ಣನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು.