ಪರಿಷತ್ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಹೆಸರು ಘೋಷಣೆ
ಬೆಂಗಳೂರು : ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ.
ಈ ಕುರಿತು ರವಿವಾರ ಪತ್ರಿಕಾ ಪ್ರಕರಣೆ ಹೊರಡಿಸಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ ಪಕ್ಷ ಈಗಾಗಲೇ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ಅವರ ಹೆಸರುಗಳನ್ನು ಪ್ರಕಟಿಸಲಾಗಿದೆ. ನಾಳೆ(ಮೇ 13) ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ.
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ನಿನ್ನೆ(ಮೇ.11) ಪ್ರಕಟಿಸಿತ್ತು. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದರು.