ರಾಜ್ಯ ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ : “ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.
“ನಮ್ಮ ದೇಶದ ಸಂವಿಧಾನ, ಏಕತೆ, ಸಮಗ್ರತೆ, ಶಾಂತಿ ರಕ್ಷಿಸಿಕೊಂಡು ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರನ್ನು ಕಾಪಾಡಲು ನಾವು ಈ ಹೋರಾಟ ಮಾಡುತ್ತಿದ್ದೇವೆ. ಬೆಳಗಾವಿ ಪುಣ್ಯಭೂಮಿ. ಇತ್ತೀಚೆಗಷ್ಟೇ ನಾವು ಮಹಾತ್ಮಾ ಗಾಂಧಿ ಅವರ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಆಚರಿಸಿದ್ದೆವು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಇದೇ ಮೈದಾನದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಮಾಡಿದ್ದೆವು” ಎಂದು ತಿಳಿಸಿದರು.
“ಗಾಂಧಿಜಿ ಅವರು ಇದೇ ಭೂಮಿಯಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ ದೇಶಕ್ಕೆ ಸ್ವತಂತ್ರ ತಂದುಕೊಟ್ಟರು. ನಮ್ಮ ಎಲ್ಲಾ ನಾಯಕರು ಸೇರಿ ಇಲ್ಲಿನ ಗಾಂಧಿ ಬಾವಿಯಲ್ಲಿ ನೀರು ತೆಗೆದುಕೊಂಡು ರಸ್ತೆ ಸ್ವಚ್ಛ ಮಾಡಿ ನಮ್ಮ ರಾಜ್ಯದ ರಕ್ಷಣೆ ಮಾಡುವ ಹೋರಾಟ ಪ್ರಾರಂಭಿಸಿದೆವು. ನಮ್ಮ ಜನರ ಧ್ವನಿ ಕೇಳಲು ಹೋರಾಟ ಮಾಡಿದೆವು. ನಂತರ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಚಿಕ್ಕೋಡಿಯಲ್ಲಿ ಮೊದಲ ಗ್ಯಾರಂಟಿಯಾಗಿ ಗೃಹಜ್ಯೋತಿಯನ್ನು ಘೋಷಿಸಿದೆವು. ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ, ಬೆಲೆ ಗಗನಕ್ಕೇರುತ್ತಿದೆ, ಆದಾಯ ಪಾತಾಳಕ್ಕೆ ಕುಸಿಯುತ್ತಿದೆ ಎಂದು ಗ್ಯಾರಂಟಿ ಯೋಜನೆ ಜಾರಿಗೆ ತಂದೆವು” ಎಂದು ಹೇಳಿದರು.
“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಹಾಲಿನ ಬೆಲೆ ಹೆಚ್ಚಾಗಿದೆ ಎಂದು ಬಿಜೆಪಿಯವರು ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಜನಾಕ್ರೋಶ ಆರಂಭಿಸಿದ ದಿನವೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಬೆಲೆ ಏರಿಸಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿದಾಗ ಎಲ್ಲಾ ಪದಾರ್ಥಗಳ ಬೆಲೆ ಕೂಡ ಸಹಜವಾಗಿ ಏರಿಕೆಯಾಗುತ್ತದೆ. ರೈತರಿಗೆ ನೆರವಾಗಬೇಕು ಎಂದು ಹಾಲಿನ ಬೆಲೆಯನ್ನು 4 ರೂ. ಏರಿಕೆ ಮಾಡಿದರೆ, ಬಿಜೆಪಿಯವರು ಪ್ರತಿಭಟನೆ ಮಾಡಿ ತಮ್ಮ ರೈತ ವಿರೋಧಿ ಮನಸ್ಥಿತಿ ಪ್ರದರ್ಶಿಸುತ್ತಿದ್ದಾರೆ. ಬಿಜೆಪಿಯವರು ತಮ್ಮ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು.
“ನಮ್ಮ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ. ಮೀಸಲಿಟ್ಟಾಗ ಸರ್ಕಾರ ದಿವಾಳಿಯಾಗಲಿದೆ ಎಂದು ಹೇಳುತ್ತಿದ್ದರು. ನಮ್ಮ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ 500 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ದೇವನಹಳ್ಳಿಯಲ್ಲಿ ಸುಮಾರು 500 ಕೋಟಿ ರೂ., ಪಿರಿಯಾಪಟ್ಟಣದಲ್ಲಿ 500 ಕೋಟಿ ರೂ., ಬೀದರ್ ಜಿಲ್ಲೆಯಲ್ಲಿ 2025 ಕೋಟಿ ರೂ. ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ” ಎಂದರು.
“ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಮಹಿಳೆಯರು ಮಾಂಗಲ್ಯ ಮಾಡಿಸಿಕೊಳ್ಳುವ ಚಿನ್ನದ ಬೆಲೆ 28 ಸಾವಿರ ರೂ. ಇತ್ತು. ಇಂದು ಅದು 1 ಲಕ್ಷಕ್ಕೆ ಏರಿಕೆಯಾಗಿದೆ. ಬೆಳ್ಳಿ 43 ಸಾವಿರದಿಂದ 94 ಸಾವಿರಕ್ಕೆ ಏರಿಕೆಯಾಗಿದೆ. ಡಾಲರ್ ಮೊತ್ತ 59 ರೂ. ನಿಂದ ಇಂದಬ 90 ರೂ. ಸನಿಹಕ್ಕೆ ಬಂದು ನಿಂತಿದೆ. ಸೀಮೆಂಟ್ 268ರಿಂದ 410ಕ್ಕೆ ಏರಿಕೆ, ಕಬ್ಬಿಣ 39 ಸಾವಿರದಿಂದ 73 ಸಾವಿರಕ್ಕೆ ಏರಿಕೆಯಾಗಿದೆ. ಸಕ್ಕರೆ 30ರಿಂದ 60ಕ್ಕೆ, ಅಕ್ಕಿ 30ರಿಂದ 60ಕ್ಕೆ, ಅಡುಗೆ ಎಣ್ಣೆ 60ರಿಂದ 200 ರೂ. ಆಗಿದೆ. ಈ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಾವು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.
“ನೀವೆಲ್ಲರೂ ಆಶೀರ್ವಾದ ಮಾಡಿ ನಮಗೆ ಅಧಿಕಾರ ಕೊಟ್ಟಿದ್ದೀರಿ. ಅಧಿಕಾರ ನಶ್ವರ, ನಮ್ಮ ಸರ್ಕಾರದ ಸಾಧನೆ ಅಜರಾಮರ, ಮತದಾರನೇ ನಮ್ಮ ಪಾಲಿನ ಈಶ್ವರ. ನೀವು ಕೊಟ್ಟ ಶಕ್ತಿಗೆ ನಿಮ್ಮ ಋಣ ತೀರಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ಬಿಜೆಪಿಯ ಕೇಂದ್ರ ಸರ್ಕಾರ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಿದೆ. ಅಂಬೇಡ್ಕರ್ ಅವರ ಹೆಸರನ್ನು ಉಳಿಸಬೇಕು, ಸಂವಿಧಾನ ಕಾಪಾಡಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಈ ಸಂವಿಧಾನದ ಮೂಲಕ ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡಿಕೊಂಡು ಬರಲಾಗುತ್ತಿದೆ” ಎಂದು ತಿಳಿಸಿದರು.
“ಸರ್ವರಿಗೂ ಸಮಬಾಳು, ಸಮಪಾಲಿನ ತತ್ವದ ಮೇಲೆ ನಮ್ಮ ಸರ್ಕಾರ ಕೆಲಸ ಮಾಡಿಕೊಂಡು ಬಂದಿದೆ. ಜನರಿಗಾಗಿ ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಕಲುಬುರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 1000 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದೇವೆ. ಲೋಕೋಪಯೋಗಿ ಇಲಾಖೆಯಿಂದ ಪ್ರತಿ ಕ್ಷೇತ್ರದಲ್ಲಿ 25-30 ಕೋಟಿಯಷ್ಟು ರಸ್ತೆ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗಿದೆ. ನೀರಾವರಿ ಇಲಾಖೆಯಗೆ 22 ಸಾವಿರ ಕೋಟಿ ರೂ. ನೀಡಲಾಗಿದ್ದು, ಈ ಜಿಲೆಯಲ್ಲೇ 2 ಸಾವಿರ ಕೋಟಿಯಷ್ಟು ನೀರಾವರಿ ಯೋಜನೆ ಹಮ್ಮಿಕೊಂಡಿದ್ದೇವೆ. ಇದೆಲ್ಲವೂ ಅಭಿವೃದ್ಧಿ ಕೆಲಸವಲ್ಲವೇ? ಬಿಜೆಪಿ ಸರ್ಕಾರ ಇಂತಹ ಕಾರ್ಯಕ್ರಮ ಮಾಡಿದ್ದರೇ? ಅವರು ಅಧಿಕಾರದಲ್ಲಿದ್ದಾಗ ಯಾವುದೇ ಸಾಕ್ಷಿ ಗುಡ್ಡೆ ಬಿಟ್ಟಿಲ್ಲ” ಎಂದರು.
“ನಮ್ಮ ದಕ್ಷ ಆಡಳಿತದಲ್ಲಿ ಇಡೀ ವಿಶ್ವದ ಅನೇಕ ಉದ್ಯಮಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿವೆ. ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ವಿಶ್ವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಬೆಳಗಾವಿ, ಧಾರವಾಡ, ವಿಜಯಪುರದಂತಹ ಎರಡನೇ ಹಂತದ ನಗರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಒಪ್ಪಂದಗಳಾಗಿವೆ. ಒಟ್ಟು 10 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆ ಹರಿದು ಬರಲಿದೆ. ಎಚ್.ಕೆ.ಪಾಟೀಲ್ ಅವರು ಪಾರಂಪರಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿ ಪ್ರವಾಸೋದ್ಯಕ್ಕೆ ಆದ್ಯತೆ ನೀಡುತ್ತಿದ್ದಾರೆ. ಸವದತ್ತಿಯ ಯಲ್ಲಮ್ಮ ದೇವಿ ಕ್ಷೇತ್ರದ ಅಭಿವೃದ್ಧಿಗೆ ಯೋಜನೆ ರೂಪಿಲಾಗಿದೆ. ಪ್ರತಿ ಇಲಾಖೆಯಲ್ಲೂ ನಮ್ಮ ಸರ್ಕಾರ ಸಾಕ್ಷಿಗುಡ್ಡೆ ನಿರ್ಮಿಸುತ್ತಿದೆ. ಕುಡಿಯುವ ನೀರಿನ ಪೂರೈಕೆಗೆ ಇಡೀ ರಾಜ್ಯದಲ್ಲಿ ಕೆರೆ ತುಂಬಿಸುವ ಕೆಲಸಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಆಮೂಲಕ ರೈತರ ಬದುಕು ಹಸನ ಮಾಡಲು ಮುಂದಾಗಿದೆ. 2028ರ ಒಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ ಚಿಕ್ಕಬಳ್ಳಾಪುರ ಹಾಗೂ ಕೋಲಾರಕ್ಕೆ ನೀರು ಪೂರೈಸುವ ಗುರಿ ಇಟ್ಟುಕೊಂಡಿದ್ದೇವೆ” ಎಂದು ಹೇಳಿದರು.
“ಬಿಜೆಪಿ ಸರ್ಕಾರ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತದೆ. ನಾವು ಬದುಕಿನ ಮೇಲೆ ಕೆಲಸ ಮಾಡುತ್ತಿದ್ದೇವೆ. ಜನರ ಬದುಕು ಕಾಪಾಡಲು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿದೆ. ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ನೀವು ಬಿಜೆಪಿಯವರಿಗೆ ಈ ಬೆಲೆ ಏರಿಕೆ ಬಗ್ಗೆ ಪ್ರಶ್ನೆ ಮಾಡಬೇಕು.
ಭಯೋತ್ಪಾದಕ ದಾಳಿಯಿಂದ ನಮ್ಮ ಸಹೋದರರು ಮೃತರಾಗಿರುವುದರಿಂದ ದೇಶದೆಲ್ಲೆಡೆ ನಮಗೆ ನೋವಾಗಿದೆ. ದೇಶದ ಐಕ್ಯತೆ, ಸಮಗ್ರತೆ ಕಾಪಾಡಲು ನಮ್ಮ ಪಕ್ಷ ಕೇಂದ್ರ ಸರ್ಕಾರದ ಬೆಂಬಲಕ್ಕೆ ನೀಡಿದೆ. ನಮ್ಮ ಸರ್ಕಾರ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಮುಖ್ಯಮಂತ್ರಿಗಳು 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲಾ ವರ್ಗದವರನ್ನು ಒಟ್ಟಾಗಿ ತೆಗೆದುಕೊಂಡು ಮುಂದೆ ಸಾಗುತ್ತಿದೆ” ಎಂದು ತಿಳಿಸಿದರು.