ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು : ಉತ್ತರ ಕನ್ನಡದ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸುವ ಬಗ್ಗೆ ಸರಕಾರ ಪರಿಶೀಲನೆ ನಡೆಸಿದ್ದು, ಸದ್ಯದಲ್ಲೇ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ದಿನಕರಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಮೈಸೂರು, ಕಲಬುರಗಿ ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಿ ಬಡವರಿಗೆ ಉಚಿತವಾಗಿ ಎಲ್ಲ ರೀತಿಯ ರೋಗಿಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವೆ. ರಾಜ್ಯದ ವಿವಿಧೆಡೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸಬೇಕು ಎಂಬುದು ಸರಕಾರದ ನೀತಿಯಾಗಿದೆ.ಹಾಗಾಗಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಪರಿಶೀಲನೆ ನಡೆದಿದೆ ಎಂದರು.
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಆ ಜಿಲ್ಲೆಯ ಶಾಸಕರ ಸಭೆ ಕರೆದು ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ಆದರೆ ಕುಮುಟದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.