ಸುರಪುರ ಶಾಸಕ ನಿಧನ ; ವಿಧಾನಸಭಾ ಅಧಿವೇಶನ ಬುಧವಾರಕ್ಕೆ ಮುಂದೂಡಿಕೆ
ಬೆಂಗಳೂರು : ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಾಸಕರ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ, "ರಾಜಾ ವೆಂಕಟಪ್ಪ ನಾಯಕ ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ" ಎಂದು ಸಂತಾಪ ವ್ಯಕ್ತಪಡಿಸಿದರು.
ಶಾಸಕರ ನಿಧನ ಹಿನ್ನಲೆಯಲ್ಲಿ ಸೋಮವಾರದ ಅಧಿವೇಶನವನ್ನು ಬುಧವಾರಕ್ಕೆ ಮುಂದೂಡಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.