ವಿದ್ಯುತ್ ಚಾಲಿತ ವಾಹನಗಳ ಮೇಲಿನ ಶೇ.10ರಷ್ಟು ಉದ್ದೇಶಿತ ತೆರಿಗೆ ಕೈ ಬಿಟ್ಟ ಸರಕಾರ
ಮೋಟಾರು ವಾಹನಗಳ ತೆರಿಗೆ ತಿದ್ದುಪಡಿ ಸೇರಿ ಎಂಟು ವಿಧೇಯಕಗಳಿಗೆ ಒಪ್ಪಿಗೆ
ಬೆಳಗಾವಿ: ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಸಲಹೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 20 ಲಕ್ಷ ರೂ.ಗಳಿಗಿಂತ ಹೆಚ್ಚಿನ ಮೊತ್ತದ ವಿದ್ಯುತ್ ಚಾಲಿತ ವಾಹನಗಳ ಮೇಲೆ ವಿಧಿಸಲು ಉದ್ದೇಶಿಸಿದ್ದ ಶೇ.10ರಷ್ಟು ತೆರಿಗೆ ಪ್ರಸ್ತಾವನೆಯನ್ನು ವಿಧೇಯಕದಿಂದ ಕೈ ಬಿಡಲು ಸರಕಾರ ನಿರ್ಧರಿಸಿದೆ.
ಬುಧವಾರ ವಿಧಾನಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಡಿಸಿದ 2023ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ(ಎರಡನೇ ತಿದ್ದುಪಡಿ) ವಿಧೇಯಕದಲ್ಲಿ 20 ಲಕ್ಷ ರೂ.ಗಳಿಗಿಂತ ಹೆಚ್ಚಿನ ಮೊತ್ತದ ವಿದ್ಯುತ್ ಚಾಲಿತ ವಾಹನಗಳಿಗೆ ಶೇ.10ರಷ್ಟು ತೆರಿಗೆ ವಿಧಿಸಲು ಉದ್ದೇಶಿಸಲಾಗಿತ್ತು.
ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಹಾಗೂ ಪರಿಸರವನ್ನು ಸಂರಕ್ಷಿಸುವ ಉದ್ದೇಶದಿಂದ ಬಳಕೆ ಮಾಡುತ್ತಿರುವ ವಿದ್ಯುತ್ ಚಾಲಿತ ವಾಹನಗಳನ್ನು ಜನಸಾಮಾನ್ಯರ ಕೈಗೆಟುವ ರೀತಿಯಲ್ಲಿ ರಿಯಾಯಿತಿಗಳನ್ನು ನೀಡಿ ಪೋತ್ಸಾಹಿಸಬೇಕೇ ಹೊರತು ತೆರಿಗೆಗಳನ್ನು ಹೆಚ್ಚಿಸಿ ವಾಹನಗಳನ್ನು ಮತ್ತಷ್ಟು ದುಬಾರಿಯನ್ನಾಗಿಸಬಾರದು ಎಂದು ಬಿಜೆಪಿ ಸದಸ್ಯ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸಲಹೆ ನೀಡಿದರು.
ಇದೇ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ, ರಾಜ್ಯಕ್ಕೆ ಹೂಡಿಕೆ ಬರುತ್ತಿದೆ. ನಾವು ಬೇರೆ ಬೇರೆ ಸಂಸ್ಥೆಗಳನ್ನು ನಮ್ಮ ರಾಜ್ಯಕ್ಕೆ ಆಕರ್ಷಿಸಬೇಕಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಳದಿಂದ ಪರಿಸರ ಮಾಲಿನ್ಯ ತಡೆಗಟ್ಟಲು ಸಹಕಾರಿಯಾಗುತ್ತದೆ. ಆದ್ದರಿಂದ ಉದ್ದೇಶಿತ ತೆರಿಗೆಯನ್ನು ಕೈಬಿಡಬೇಕು ಎಂದು ಕೋರಿದರು.
ಪಕ್ಷಾತೀತವಾಗಿ ಶಾಸಕರಿಂದ ವ್ಯಕ್ತವಾದ ಅಭಿಪ್ರಾಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉದ್ದೇಶಿತ ತೆರಿಗೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು. ಅದರಂತೆ, ತಿದ್ದುಪಡಿಯೊಂದಿಗೆ ಸಚಿವ ರಾಮಲಿಂಗಾರೆಡ್ಡಿ ಮಂಡಿಸಿದ 2023ನೇ ಸಾಲಿನ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ(ಎರಡನೆ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆಯಿತು.
ಅನುಮೋದನೆ ಪಡೆದ ಇತರ ವಿಧೇಯಕಗಳು: 2023ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ, ಕರ್ನಾಟಕ ಸಾರ್ವಜನಿಕ ಪರೀಕ್ಷೆ(ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ, ಕರ್ನಾಟಕ ಉಚ್ಛ ನ್ಯಾಯಾಲಯ(ತಿದ್ದುಪಡಿ) ವಿಧೇಯಕ, ಕರ್ನಾಟಕ ಸಿವಿಲ್ ನ್ಯಾಯಾಲಯಗಳ(ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆಯಿತು.
ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ವಿಧೇಯಕ, ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ(ಹಂಚಿಕೆ ಮಾಡಬಹುದಾದ ಆಯವ್ಯಯ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ)(ತಿದ್ದುಪಡಿ) ವಿಧೇಯಕ, ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ(ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆಯಿತು.