ಸಿಎಂ ಕಾರ್ಯದರ್ಶಿ, ಸಲಹೆಗಾರರ ಹುದ್ದೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಸೆ.7: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು, ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನೇಮಕಾತಿ ಪ್ರಶ್ನಿಸಿ ವಕೀಲ ಎಸ್.ಉಮಾಪತಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಸರಕಾರ ಸಲಹೆಗಾರರನ್ನು ನೇಮಿಸಬಾರದೆಂಬ ನಿರ್ಬಂಧವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಅರ್ಜಿಯಲ್ಲಿ ಏನಿದೆ?: ಈ ನಾಲ್ಕೂ ಜನರಿಗೆ ಹುದ್ದೆಗಳನ್ನು ಸೃಜಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಇವರಿಗೆ ನೀಡಲಾಗುವ ಸಂಬಳ, ಸಾರಿಗೆ, ವಸತಿ ಭತ್ಯೆ ಇತ್ಯಾದಿ ಖರ್ಚುಗಳು ರಾಜ್ಯದ ಬೊಕ್ಕಸಕ್ಕೆ ವೃಥಾ ಹೊರೆ. ಇವೆಲ್ಲಾ ರಾಜಕೀಯ ನೇಮಕಾತಿ ಹಾಗೂ ಏಕಪಕ್ಷೀಯ ನಿರ್ಧಾರಗಳಾಗಿವೆ ಎಂದು ಉಲ್ಲೇಖಿಸಲಾಗಿದೆ.
ಮುಖ್ಯಮಂತ್ರಿಗಳ ಕಚೇರಿ ಎಂಬುದು ಸಾರ್ವಜನಿಕ ಕಚೇರಿ. ಆದರೆ, ಇಲ್ಲೀಗ ಮುಖ್ಯಮಂತ್ರಿಗಳ ಬಂಧುಗಳು, ಅವರ ಹಿಂಬಾಲಕರಿಗೇ ಆಸ್ಪದ ನೀಡಲಾಗಿದೆ. ಕಾನೂನಿನಲ್ಲಿ ಇಂತಹ ಹುದ್ದೆಗಳನ್ನು ರೂಪಿಸಲು ಅವಕಾಶವಿಲ್ಲ. ಹೀಗಾಗಿ, ಪ್ರತಿವಾದಿಗಳ ನೇಮಕಾತಿ ಸಂವಿಧಾನ ವಿರೋಧಿಯಾಗಿದ್ದು ಕೂಡಲೇ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.