‘ಜೈನಮುನಿ ಕೊಲೆ ಪ್ರಕರಣ’ ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜು.11: ಜೈನಮುನಿಗಳ ಕೊಲೆ ಪ್ರಕರಣ, ಕ್ಷುಲ್ಲಕ ಕಾರಣಕ್ಕೆ ಸಂಭವಿಸಿದ ಟಿ.ನರಸೀಪುರ ಕೊಲೆ ಪ್ರಕರಣ ಸೇರಿದಂತೆ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಅತ್ಯಂತ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರು ಎಷ್ಟೇ ಪ್ರಭಾವಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಂಗಳವಾರ ವಿಧಾನಸಭೆಯಲ್ಲಿ ನಿಯಮ 60ರ ಸೂಚನೆ ಮೇರೆಗೆ ಬಿಜೆಪಿ ಸದಸ್ಯರಾದ ಬಸವರಾಜ ಬೊಮ್ಮಾಯಿ, ಬಸÀನಗೌಡ ಪಾಟೀಲ್ ಯತ್ನಾಳ್, ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ. ಸುನೀಲ್ ಕುಮಾರ್ ಪ್ರಸ್ತಾಪಿಸಿ ವಿಷಯಕ್ಕೆ ಉತ್ತರಿಸಿದ ಅವರು, ‘ಜೈನಮುನಿಗಳ ಕೊಲೆ ಅಮಾನುಷವಾದುದು, ಯಾರು ಕೊಲೆ ಮಾಡಿದರೂ ಶಿಕ್ಷೆ ಆಗಲೇಬೇಕು. ಪೆÇಲೀಸರು ದೂರು ಬಂದ 6 ಗಂಟೆಗೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ನಿರಂತರ 7 ಗಂಟೆಗಳ ಕಾಲ ಪ್ರಯತ್ನಿಸಿ ಕೊಳವೆಬಾವಿಯಿಂದ ಮೃತದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂದು ಹೇಳಿದರು.
ಎಫ್ಐಆರ್ ನಲ್ಲಿ ಇಬ್ಬರು ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಪೊಲೀಸರು ಈಗಾಗಲೆ ಈ ನಿಟ್ಟಿನಲ್ಲಿ ತನಿಖೆ ಮುಂದುವರಿಸಿದ್ದು, ಯಾರು ಎಷ್ಟೇ ಪ್ರಭಾವಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೆ ಇಲ್ಲ. ಒತ್ತಡ ಮತ್ತು ಪ್ರಭಾವಗಳಿಗೆ ಮಣಿಯದೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸುವ ಕೆಲಸ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಜೈನಮುನಿ ಕೊಲೆ ಪ್ರಕರಣ ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ. ರಾಜ್ಯದ ಪೊಲೀಸರು ಸಮರ್ಥರಿದ್ದು, ಅವರ ಮೂಲಕವೆ ತನಿಖೆ ಮಾಡಿಸಿ ಕಠಿಣ ಶಿಕ್ಷೆ ವಿಧಿಸಲಾಗುವುದು. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಅದೇ ರೀತಿ ಟಿ.ನರಸೀಪುರದಲ್ಲಿ ನಡೆದಿರುವ ಯುವಕನ ಕೊಲೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವಿದ್ದರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಎಲ್ಲ ಪ್ರಕರಣಗಳನ್ನು ನಮ್ಮ ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಜೈನಮುನಿಗಳ ಆಶ್ರಮ ಹಾಗೂ ಘಟನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಾಸ್ತವ ವರದಿಯನ್ನು ಸದನದ ಮುಂದಿಟ್ಟರು ಮತ್ತು ಈ ವಿಷಯದಲ್ಲಿ ನಮ್ಮ ಪೊಲೀಸರು ಎಲ್ಲ ಆಯಾಮಗಳಿಂದಲೂ ಅತ್ಯಂತ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದು,ಸಿಬಿಐ ತನಿಖೆ ಅಗತ್ಯವಿಲ್ಲ ಎಂದರು.
ಜೈನ ಮುನಿಗಳ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸದನದಲ್ಲಿ ಧರಣಿ ನಡೆಸಿದರು. ಆದರೆ, ಸರಕಾರ ರಾಜ್ಯದ ಪೊಲೀಸರ ಮೂಲಕವೆ ತನಿಖೆ ನಡೆಸುವುದಾಗಿ ಘೋಷಿಸಿದೆ.