ಕಾಂಗ್ರೆಸ್‌ನ ರಾಜ್ಯದ ಎರಡನೇ ಪಟ್ಟಿಯಲ್ಲಿ ಸಚಿವರ ಮಕ್ಕಳು, ಪತ್ನಿಗೆ ಟಿಕೆಟ್
ಕೇಂದ್ರದ ಮಾಜಿ ಸಚಿವರ ಪುತ್ರ, ಎಐಸಿಸಿ ಅಧ್ಯಕ್ಷರ ಅಳಿಯನಿಗೂ ಟಿಕೆಟ್
ಬೆಂಗಳೂರು : ರಾಜ್ಯದ 17 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದ ಪಟ್ಟಿ ಬಿಡುಗಡೆಯಾಗಿದ್ದು, 6 ಕ್ಷೇತ್ರಗಳಲ್ಲಿ ಹಾಲಿ ಸಚಿವರ ಮಕ್ಕಳು, ಪತ್ನಿಗೆ ಟಿಕೆಟ್ ನೀಡಲಾಗಿದೆ. 2 ಕ್ಷೇತ್ರಗಳಲ್ಲಿ ಮಾಜಿ ಕೇಂದ್ರದ ಮಾಜಿ ಸಚಿವರ ಪುತ್ರ, ಎಐಸಿಸಿ ಅಧ್ಯಕ್ಷರ ಅಳಿಯನಿಗೂ ಟಿಕೆಟ್ ನೀಡಲಾಗಿದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿದ್ದಾರೆ. ಕಲಬುರ್ಗಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಎಐಸಿಸಿ ಅಧ್ಯಕ್ಷರ ಕುಟುಂಬ ಸದಸ್ಯರಿಗೆ ಮಣೆ ಹಾಕಲಾಗಿದೆ.
ಚಿಕ್ಕೋಡಿಗೆ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಆರಂಭದಲ್ಲಿ ತಮ್ಮ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಬದಲಾಗುತ್ತಿರುವ ರಾಜಕೀಯ ಸನ್ನಿವೇಶದ ಹಿನ್ನೆಲೆಯಲ್ಲಿ ಅವರು ತಮ್ಮ ನಿಲುವು ಬದಲಾಯಿಸಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಕುಟುಂಬದ ಹಿಡಿತ ಅರಿತ ಹೈಕಮಾಂಡ್ ಈ ಬಾರಿ ಬಿಜೆಪಿಯನ್ನು ಸೊಲಿಸಲು ಈ ತಂತ್ರ ಹೆಣೆದಿದೆ ಎನ್ನಲಾಗಿದೆ. ರಾಜಕೀಯದಲ್ಲಿ ಜಾರಕಿಹೊಳಿ ಸಹೋದರು ಬೇರೆ ಬೇರೆ ಪಕ್ಷದಲ್ಲಿದ್ದರೂ, ಕುಟುಂಬದ ವಿಚಾರದಲ್ಲಿ ಯಾವತ್ತು ಬಿಟ್ಟು ಕೊಡುವುದಿಲ್ಲ ಎನ್ನುದನ್ನು ಮನದಟ್ಟು ಮಾಡಿಕೊಂಡಿರುವ ಪಕ್ಷದ ಮುಖಂಡರು ಪ್ರಿಯಾಂಕಾ ಅವರಿಗೆ ಬಿ ಫಾರ್ಮ್ ನೀಡಿದ್ದಾರೆ.
ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ಗೆ ಸ್ಥಾನ
ಕುಂದಾನಗರಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಟ್ಟಿಹೊಳಿ ಗ್ರಾಮದ ನಿವಾಸಿಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ತಂದೆ ರವೀಂದ್ರ. ತಾಯಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದಾರೆ. 2013ರಿಂದ ಸಕ್ರಿಯ ರಾಜಕಾರಣದಲ್ಲಿರುವ ಮೃಣಾಲ್ ಹೆಬ್ಬಾಳ್ಕರ್ ಎರಡು ಅವಧಿಗೆ ಕಾಂಗ್ರೆಸ್ ಯುವ ಘಟಕದ ಬೆಳಗಾವಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಬಾಗಲಕೋಟೆಯಲ್ಲಿ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಗೆ ಟಿಕೆಟ್
ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ಗೆ ಈ ಬಾರಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಮೂಲತಃ ವಿಜಯಪುರ ಜಿಲ್ಲೆಯವರಾದ ಸಂಯುಕ್ತಾ ಪಾಟೀಲ್ ಅವರನ್ನು ‘ಹೊರಗಿನವರು’ ಎಂಬ ಹಣೆ ಪಟ್ಟಿಯ ನಡುವೆಯೂ ಹೈಕಮಾಂಡ್ ಬಿ.ಫಾರ್ಮ್ ನೀಡಿದೆ. ಇದಕ್ಕೆ ಪ್ರಬಲ ಕಾರಣ ಸಮೀಕ್ಷೆಗಳ ಪ್ರಕಾರ, ಸಂಯುಕ್ತ ಪಾಟೀಲ್ ಗೆಲುವು ಸುಲಭ ಎಂದು ವಿಶ್ಲೇಷಿಸಲಾಗಿದೆ. ಹೀಗಾಗಿ ರಾಜ್ಯ ನಾಯಕರು ಸಚಿವರ ಪುತ್ರಿಗೆ ಮಣೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ.
ಬೀದರ್ ನಲ್ಲಿ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಲೋಕಸಮರಕ್ಕೆ
ಅರಣ್ಯ ಸಚಿವ ಈಶ್ವರ್ ಖಂಡ್ರ ಪುತ್ರ ಸಾಗರ್ ಖಂಡ್ರೆ ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಿಜೆಪಿಯ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ದ ಸ್ಪರ್ಧಿಸಲಿದ್ದಾರೆ. ಕಾನೂನು ಪದವಿ ಪಡೆದಿರುವ ಸಾಗರ್ ಖಂಡ್ರೆ ಅವರು, ಬೀದರ್ ಜಿಲ್ಲಾದ್ಯಂತ ಇರುವ ತಾತ ಮಾಜಿ ಸಚಿವ ಭೀಮಣ್ಣ ಖಂಡ್ರೆ ಹಾಗೂ ತಂದೆ ಈಶ್ವರ ಖಂಡ್ರೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ಬೆಂಗಳೂರು ದಕ್ಷಿಣಕ್ಕೆ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಮಣೆ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣದ ಟಿಕೆಟ್ ಘೋಷಣೆಯಾಗಿದ್ದು, ಯುವ ಸಂಸದ ತೇಜಸ್ವಿ ಸೂರ್ಯ ವಿರುದ್ದ ಅವರು ಕಣಕ್ಕಿಳಿಯಲಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿ ಅವರು ಕರ್ನಾಟಕದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಪ್ರಸಕ್ತ ಪ್ರಧಾನ ಕಾರ್ಯದರ್ಶಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸದಸ್ಯರಾಗಿದ್ದಾರೆ. ಅವರು 2018 ರಲ್ಲಿ ಜಯನಗರ ವಿಧಾನ ಸಭಾ ಕ್ಷೇತ್ರದಿಂದ ಕರ್ನಾಟಕದ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. 2023 ರಲ್ಲಿ ಬಿಜೆಪಿಯ ಸಿ.ಕೆ. ರಾಮಮೂರ್ತಿಯವರ ವಿರುದ್ಧ ವಿಧಾನಸಭಾ ಚುನಾವಣೆಯಲ್ಲಿ ಸೌಮ್ಯ ರೆಡ್ಡಿ ಕೇವಲ 16 ಮತಗಳಿಂದ ಸೋತರು. ಸೌಮ್ಯ ಅವರು ನ್ಯೂಯಾರ್ಕ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಪತ್ನಿಗೆ ದಾವಣಗೆರೆ ಟಿಕೆಟ್
ದಾವಣಗೆರೆ ಕ್ಷೇತ್ರದಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸೊಸೆ, ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.
ದಂತ ವೈದ್ಯಯಾಗಿರುವ ಇವರು, ಎಸ್ ಎಸ್ ಕೇರ್ ಟ್ರಸ್ಟ್ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಕಲಬುರಗಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯನಿಗೆ ಟಿಕೆಟ್
ಈ ಬಾರಿ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯ ರಾಧಕೃಷ್ಣ ದೊಡ್ಡಮನಿ ಅವರ ಹೆಸರನ್ನು ಘೋಷಣೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸ್ಪರ್ಧೆಗೆ ನಿರಾಕರಿಸಿರುವುದರಿಂದ ಪಕ್ಷದ ಶಾಸಕರು, ಸಚಿವರು ಹಾಗೂ ಮುಖಂಡ ಅಭಿಪ್ರಾಯ ಪಡೆದು ರಾಧಕೃಷ್ಣ ದೊಡ್ಡಮನಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಲಬುರಗಿ ಮೀಸಲು ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗಿದೆ
ಒಟ್ಟು ಪ್ರಕಟವಾಗಿರುವ 17 ಅಭ್ಯರ್ಥಿಗಳಲ್ಲಿ 8 ಮಂದಿ ಕುಟುಂಬ ರಾಜಕಾರಣದ ಹಿನ್ನಲೆಯವರು. ಬೆಂಗಳೂರು ಕೇಂದ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮನ್ಸೂರ್ ಖಾನ್ ಅವರು ಕೇಂದ್ರದ ಮಾಜಿ ಸಚಿವ ರಹಮಾನ್ ಖಾನ್ ಅವರ ಪುತ್ರ.