ನಾಳೆ (ಎ.17) ಮಂಡ್ಯ-ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ
ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎ.17ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಮಂಡ್ಯ ಹಾಗೂ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಂಗಳವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ನಾಳೆ ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮೊದಲು ಮಂಡ್ಯಕ್ಕೆ ತೆರಳಲಿದ್ದಾರೆ. ಆನಂತರ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದಿಲ್ಲಿಗೆ ಹಿಂದಿರುಗಲಿದ್ದಾರೆ ಎಂದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು, ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಆದುದರಿಂದ, ಅವರು ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.
Next Story