ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಶಾಸಕ ಗಾಲಿ ಜನಾರ್ದನ ರೆಡ್ಡಿ
Photo: X/@GaliJanardhanar
ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ಅಮಿತ್ ಶಾ ಭೇಟಿಗೆ ಸಂಬಂಧಿಸಿದಂತೆ ಖುದ್ದು ಜನಾರ್ದನ ರೆಡ್ಡಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಅಮಿತ್ ಶಾ ಅವರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇನೆ ಎಂದು ವಿವರಣೆ ನೀಡಿದ್ದಾರೆ.
ಇತ್ತೀಚೆಗೆ ಜರುಗಿದ ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತವನ್ನು ಚಲಾಯಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದರು.
ಆದರೆ, ಇದೀಗ ಏಕಾಏಕಿ ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಜನಾರ್ದನ ರೆಡ್ಡಿ, ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಬಿಜೆಪಿಯಲ್ಲೇ ಸಚಿವರಾಗಿದ್ದ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು. ಇದೀಗ ತಮ್ಮ ಆಪ್ತ ಬಿ.ಶ್ರೀರಾಮುಲು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಅಮಿತ್ ಶಾ ಭೇಟಿಗೆ ಮಹತ್ವ ಬಂದಿದೆ.
‘ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಶಾ ಅವರ ಆಹ್ವಾನದ ಮೇರೆಗೆ ಹೊಸದಿಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಅವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ’
ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ, ಹಾಲಿ ಶಾಸಕ