ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು
ರವನೀತ್ ಸಿಂಗ್ ಬಿಟ್ಟು (Photo: PTI)
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು "ದೇಶದ ನಂಬರ್ ಒನ್ ಭಯೋತ್ಪಾದಕ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರವನೀತ್ ಸಿಂಗ್ ಬಿಟ್ಟು ವಿರುದ್ಧ ಕರ್ನಾಟಕ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿಯಲ್ಲಿ ಬಿಟ್ಟು ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಬೆದರಿಕೆ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಇಬ್ಬರು ನಾಯಕರು ಮತ್ತು ಶಿವಸೇನೆಯ ಶಾಸಕರ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು.
ದೂರಿನಲ್ಲಿ ಬಿಜೆಪಿ ನಾಯಕ ತರ್ವಿಂದರ್ ಸಿಂಗ್ ಮರ್ವಾ, ಉತ್ತರ ಪ್ರದೇಶದ ಸಚಿವ ರಘುರಾಜ್ ಸಿಂಗ್ ಮತ್ತು ಮಹಾರಾಷ್ಟ್ರದ ಬುಲ್ಧಾನದ ಶಿವಸೇನಾ(ಶಿಂಧೆ ಬಣ) ಶಾಸಕ ಸಂಜಯ್ ಗಾಯಕ್ವಾಡ್ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಗಿತ್ತು.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆಯನ್ನು ಟೀಕಿಸುವಾಗ ಕೇಂದ್ರ ಸಚಿವ ರವನೀತ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.