ವಾಲ್ಮೀಕಿ ನಿಗಮದ ಹಗರಣ ಪ್ರಕರಣ : ಮಾಜಿ ಸಚಿವ ಬಿ.ನಾಗೇಂದ್ರರ ಪತ್ನಿ ಮಂಜುಳಾ ಈ.ಡಿ ವಶಕ್ಕೆ
ED | PTI
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಈ.ಡಿ.) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಬುಧವಾರ ವಶಕ್ಕೆ ಪಡೆದಿದ್ದಾರೆ.
ನಗರದ ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ವಶಕ್ಕೆ ಪಡೆದಿರುವ ಅಧಿಕಾರಿಗಳು, ಶಾಂತಿನಗರದ ಕಚೇರಿಗೆ ಕರೆದೊಯ್ದು ವಿಚಾರಣೆ ಕೈಗೊಂಡಿರುವುದಾಗಿ ತಿಳಿದು ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರದಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಈಗಾಗಲೇ ಬಂಧನಕ್ಕೆ ಒಳಗಾಗಿರುವ ಬಿ.ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಈ.ಡಿ. ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಈ.ಡಿ. ಮೂಲಗಳು ತಿಳಿಸಿವೆ.
ಇತ್ತೀಚಿಗೆ ಈ.ಡಿ. ಅಧಿಕಾರಿಗಳು ವಾಲ್ಮೀಕಿ ನಿಗಮದ ಕೋಟ್ಯಂತರ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿ, ಹೆಚ್ಚಿನ ವಿಚಾರಣೆಗೆ ಬಿ.ನಾಗೇಂದ್ರರನ್ನು ಬಂಧಿಸಲಾಗಿತ್ತು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಎಂಬುವರು ಶಿವಮೊಗ್ಗದಲ್ಲಿ ಕೆಲವು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ನಿಗಮದಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು.