ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕ ಯತ್ನಾಳ್ ವಿಚಾರಣೆಗೆ ಹೈಕೋರ್ಟ್ ತಡೆ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಕಳೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಪೀಠವು ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಗೆ ತಡೆ ನೀಡಿತು. ಅಲ್ಲದೇ, ಮೂಲ ದೂರುದಾರರಾದ ಮಂಜುನಾಥ್ ಕಲಬುರಗಿ ಅವರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಜರಂಗದಳವನ್ನು ಕಾಂಗ್ರೆಸ್ ಪಕ್ಷ ನಿಷೇಧಿಸಿದರೆ, ಆ ಪಕ್ಷದವರಿಗೆ ಎಲ್ಲ ಹಿಂದೂಗಳು ಬಹಿಷ್ಕಾರ ಹಾಕುತ್ತಾರೆ ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.