ಅತಿಯಾಗಿ ವರ್ತಿಸಿದರೆ ‘ಹಸ್ತಕ್ಕೆ ಆಪರೇಷನ್’ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ: ಸಿ.ಟಿ.ರವಿ ತಿರುಗೇಟು
ಬೆಂಗಳೂರು, ಆ. 19: ‘ಕಾಂಗ್ರೆಸ್ ಸರಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಶನಿವಾರ ನಗರದ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಹಸ್ತಕ್ಕೆ ಆಪರೇಷನ್ ಮಾಡಿದರೆ ಏನಾಗುತ್ತದೆ ಎಂಬುದನ್ನು ನಾನೀಗ ಹೇಳುವುದಿಲ್ಲ. ನಮಗೆ ಹಿಂದೆ 104 ಸೀಟು ಬಂದಿತ್ತು. ಯಾರಿಗೂ ಬಹುಮತ ಇರಲಿಲ್ಲ. ಕಾಂಗ್ರೆಸ್- ಜೆಡಿಎಸ್ ಸೇರಿ ಸರಕಾರ ನಡೆಸಿದ್ದವು. 3 ತಿಂಗಳಿಗೆ ನಿಮ್ಮದು ಅಧ್ವಾನ ಆಗಿತ್ತು. ಒಬ್ಬರಿಗೆ ಒಬ್ಬರನ್ನು ಕಂಡರೆ ಆಗದ ಸ್ಥಿತಿ ಇತ್ತು’ ಎಂದು ವಿವರಿಸಿದರು.
‘ಅನಿಶ್ಚಿತತೆ, ಅರಾಜಕೀಯ ಸ್ಥಿತಿ ಬಂದಾಗ ಶಾಸಕರಿಗೆ ಬಿಜೆಪಿಯೇ ಪರ್ಯಾಯ ಎನಿಸಿತ್ತು. ಈಗ ಪೂರ್ಣ ಬಹುಮತ ಇದೆ. ಅತಿಯಾಗಿ ಮಾಡಲು ಹೋದರೆ ಪರಿಸ್ಥಿತಿ ಕೆಟ್ಟದ್ದಾಗಲಿದೆ. ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಆಡಳಿತ ನಡೆಸುತ್ತಿದೆ. ಒಳ್ಳೆಯ ಆಡಳಿತ ನಡೆಸುವ ಗುರಿ ಇಟ್ಟುಕೊಳ್ಳಬೇಕು’ ಎಂದು ಅವರು ಹೇಳಿದರು.
‘ಇಲ್ಲದೇ ಇರುವುದನ್ನು ಮಾಡಲು ಹೊರಟರೆ ಸುಮ್ಮನೆ ಕುಳಿತುಕೊಳ್ಳುವವರು ನಾವಲ್ಲ. ನಾವೇನಾದರೂ ಮಾಡಿದರೆ ಮೇಲೇಳಲು ಆಗಲ್ಲ ಎಂದು ಎಚ್ಚರಿಕೆ ನೀಡಿದರು. ನಾವೇನು ಮಾಡುತ್ತೇವೆಂದು ಹೇಳುವುದಿಲ್ಲ. ಮುಟ್ಟಿನೋಡುವಂತೆ ಮಾಡುತ್ತೇವೆ ಎಂದು ಎಚ್ಚರಿಸಿದ ಅವರು, ನಾವು ಮಾಡಿದಾಗ ಆಪರೇಷನ್ ಎನ್ನುತ್ತಾರೆ. ಅದೆಲ್ಲ ಪಟ್ಟಿ ನಮ್ಮಲ್ಲಿದೆ. ಅದನ್ನು ಮುಖಕ್ಕೆ ಹಿಡಿಯಬಯಸುತ್ತೇವೆ’ ಎಂದು ಹೇಳಿದರು.
‘ತಮ್ಮ ಪಕ್ಷದ ಹಿರಿಯ ಶಾಸಕರನ್ನು ಹಿಡಿದಿಡಲಾಗದ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ನಮ್ಮ ಪಕ್ಷ ಬಿಟ್ಟು ಯಾರೂ ಹೋಗುವುದಿಲ್ಲ. ಸಚಿವರು ಪತ್ರ ಬರೆದಿದ್ದಾರೆ. ಎಲ್ಲವೂ ಸರಿ ಇದ್ದರೆ ಯಾಕೆ ಪತ್ರ ಬರೆಯುತ್ತಾರೆ. ಎಲ್ಲವೂ ಸರಿ ಇಲ್ಲದಾಗ ರಾಜಕೀಯದಲ್ಲಿ ಪ್ರೇಮಪತ್ರಗಳು ಶುರುವಾಗುತ್ತವೆ. ಈಗ ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿ ಇಲ್ಲವೆಂದು ಶಾಸಕರೇ ಹೇಳುವಾಗ ಯಾರೂ ಅಲ್ಲಿಗೆ ಹೋಗುವುದಿಲ್ಲ. ಇದನ್ನು ಮೀರಿ ಅತಿರೇಕಕ್ಕೆ ಕೈಹಾಕಿದರೆ ನಮಗೂ ಏನು ಮಾಡಬೇಕೆಂದು ಗೊತ್ತಿದೆ ಎಂದು ಎಚ್ಚರಿಕೆ ನೀಡಿದರು.