ನಾವು ಜೆಡಿಎಸ್ ನವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಸಂಸದ ಡಿ.ಕೆ. ಸುರೇಶ್
ಬೆಂಗಳೂರು: “ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ” ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ” ಎಂದು ತಿರುಗೇಟು ನೀಡಿದರು.
ದೇವೇಗೌಡರು ಈ ಹಿಂದೆ ಆಡಿದ್ದ ಮಾತುಗಳನ್ನು ಜನರಿಗೆ ತೋರಿಸಿ:
“ಜಾತ್ಯಾತೀತ ತತ್ವಗಳ ಬಗ್ಗೆ ನಾನು ಮಾತನಾಡಿದರೆ ಪ್ರಚಾರ ಆಗುವುದಿಲ್ಲ. ನಿಮಗೆ ಬೇಕಾದ ಹೇಳಿಕೆಗಳನ್ನು ನಾನು ಕೊಡಲು ಆಗುವುದಿಲ್ಲ. ಮಾಜಿ ಪ್ರಧಾನಿಗಳು ಹಿಂದೆ ಹೇಳಿದ್ದರು, ʼಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆʼ, ʼಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆʼ, ʼರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆʼ - ಎಂಬೆಲ್ಲ ಹೇಳಿಕೆಗಳನ್ನು ಜನರಿಗೆ ತೋರಿಸಿ. ನಾನು ಮಾಡಿರುವ ಕೆಲಸಗಳಿಗೆ ನನ್ನ ಕ್ಷೇತ್ರದ ಜನತೆಯ ಬಳಿ ಕೂಲಿ ಕೇಳುತ್ತಿದ್ದೇನೆ. ಮಾಧ್ಯಮದವರು ನನಗೆ ಕೂಲಿ ಕೊಡಿಸುತ್ತೀರಾ ಎನ್ನುವ ಭಾವನೆ ಇದೆ” ಎಂದು ಹೇಳಿದರು.
ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ:
ತಮಿಳುನಾಡಿನ ಕೃಷ್ಣಗಿರಿ ಸೇರಿದಂತೆ ಇತರೆಡೆಯಿಂದ ಬಂದು ಬಾಂಬ್ ಇಡುತ್ತಾರೆ ಎನ್ನುವ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಉನ್ನತ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಬಳಿ ಇವೆ. ಭಯೋತ್ಪಾದಕರು ಎಲ್ಲೆಲ್ಲಿ ಇದ್ದಾರೆ ಎನ್ನುವುದು ಅವರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುವುದು ಬಿಟ್ಟು ಕೇಂದ್ರ ಸರ್ಕಾರದ ಬಳಿ ಪ್ರಶ್ನೆ ಮಾಡಲಿ. ಕೃಷ್ಣಗಿರಿಯಿಂದ ಬರುತ್ತಾರೆ ಎನ್ನುವುದು ಅವರಿಗೆ ತಿಳಿದಿದೆ ಎಂದರೆ ಬೇಕಂತಲೇ ಎಲ್ಲವನ್ನು ಮುಚ್ಚಿಡುತ್ತಿದ್ದಾರೆ ಎಂದರ್ಥವಲ್ಲವೇ? ಈ ವಿಚಾರದಲ್ಲೂ ರಾಜಕಾರಣಕ್ಕೆ ಮುಂದಾಗಿದ್ದಾರೆ” ಎಂದು ಹೇಳಿದರು.