ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಸರಕಾರದ ನಿರ್ಧಾರ ಪ್ರಶ್ನಿಸಿ ಕೋರ್ಟ್ ಮೊರೆ ಹೋಗುತ್ತೇನೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆದಿರುವ ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಒಳ್ಳೆಯ ಮುಖ್ಯಮಂತ್ರಿ. ಆದರೆ, ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆಯಲು ನಿರ್ಣಯ ಕೈಗೊಳ್ಳುವ ಮೂಲಕ ಅವರ ಗೌರವಕ್ಕೆ ಅವರೇ ಧಕ್ಕೆ ತಂದು ಕೊಂಡಿದ್ದಾರೆ, ಇದು ನಿಜಕ್ಕೂ ಆಘಾತಕಾರಿಯಾಗಿದೆ ಎಂದರು.
ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆದಿರುವ ಸರಕಾರದ ನಿರ್ಣಯ ಕುರಿತು ಸದನದಲ್ಲಿ ಚರ್ಚೆ ಆಗಬೇಕು. ಅದರ ಜೊತೆಯಲ್ಲಿಯೇ ನಾನು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ. ಈ ಪ್ರಕರಣವನ್ನು ಸುಮ್ಮನೆ ಬಿಡುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ಬಿಜೆಪಿ ವರಿಷ್ಠರು ಪಂಚ ರಾಜ್ಯಗಳ ಚುನಾವಣೆಯಲ್ಲಿ ತಲ್ಲೀನರಾಗಿದ್ದರು. ಇದೀಗ ರಾಜಸ್ಥಾನ, ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯಲ್ಲಿ ಇದ್ದಾರೆ. ಶೀಘ್ರವೇ ವರಿಷ್ಠರನ್ನು ಭೇಟಿಯಾಗಿ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಬಗ್ಗೆ ಕಾನೂನಾತ್ಮಕವಾಗಿ ಹೋರಾಟ ಮಾಡುವ ಬಗ್ಗೆಯೂ ಚರ್ಚೆ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.