ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ: ಸಿದ್ದರಾಮಯ್ಯ
ಬೆಂಗಳೂರು, ಡಿ.11: ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ಇದೊಂದು ಇಡೀ ಸಮಾಜವೇ ತಲೆತಗ್ಗಿಸುವಂತಹ ಕೃತ್ಯ. ಇಂತಹ ಹೀನ ಕೃತ್ಯಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣಕ್ಕೆ ಸಂಬಂಧಿಇಸ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಕರೆದುಕೊಂಡು ಯುವಕ ಓಡಿ ಹೋಗಿದ್ದರಿಂದ ಆಕ್ರೋಶಗೊಂಡ ಯುವತಿಯ ಸಂಬಂಧಿಕರು ಯುವಕನ ಮನೆಯನ್ನು ಧ್ವಂಸಗೊಳಿಸಿ, ಆತನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.