ಬೆಳಗಾವಿ | ಮಹಿಳೆಯರಿಬ್ಬರ ಬಟ್ಟೆ ಹರಿದು ಸಾರ್ವಜನಿಕವಾಗಿ ನೆರೆಹೊರೆಯವರಿಂದ ಹಲ್ಲೆ : ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ಬೆಳಗಾವಿ : ಸಾರ್ವಜನಿಕವಾಗಿ ಬಟ್ಟೆ ಹರಿದು ವಿವಾಹಿತ ಮಹಿಳೆ ಹಾಗೂ ಆಕೆಯ ತಾಯಿಯ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯರಿಬ್ಬರ ಮೇಲೆ ಹಲ್ಲೆ ಮಾಡಿ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಲಾಗಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಕೃತ್ಯದ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ಬೆಳಗಾವಿ ಜಿಲ್ಲೆಯ ವಡ್ಡರವಾಡಿಯ ಮನೆಯೊಂದರಲ್ಲಿ ಮಕ್ಕಳ ಜೊತೆ ಮಹಿಳೆಯರಿಬ್ಬರು ನಾಲ್ಕು ವರ್ಷಗಳಿಂದ ವಾಸವಾಗಿದ್ದರು. ಅಲ್ಲೇ ಪಕ್ಕದಲ್ಲಿ ವಾಸವಿರುವ ನರೆಹೊರೆಯ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಇದಷ್ಟೇ ಅಲ್ಲದೆ, ಮಹಿಳೆಯ ಮನೆಗೆ ನುಗ್ಗಿ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಬಿಎನ್ಎಸ್ ಕಾಯ್ದೆಯ ವಿಧಿ 115(2), 3(5), 331, 352 ಹಾಗೂ 74 ರ ಅಡಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ಘಟನೆ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಮೂವರ ಬಂಧನ: ‘ಈ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ. ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಸ್ಥಳೀಯ ಮಟ್ಟದಲ್ಲಿ ಗಲಾಟೆ ನಡೆಸಿದ್ದು, ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ ಕಲ್ಪಿಸಲಾಗಿದೆ’ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾಹಿತಿ ನೀಡಿದ್ದಾರೆ.
‘ದೇವಸ್ಥಾನಕ್ಕೆ ತಮ್ಮ ಜಾಗವನ್ನು ಬರೆಸಿಕೊಳ್ಳಲು ದುರುದ್ದೇಶದಿಂದ ತಮ್ಮ ವಿರುದ್ಧ ‘ವೇಶ್ಯಾವಾಟಿಕೆ ಮಾಡುತ್ತಿದ್ದಿಯಾ’ ಎಂದು ಆರೋಪಿಸಿದ್ದಾರೆ. ಅಲ್ಲದೆ, ನಮ್ಮ ಮನೆಗೆ ನುಗ್ಗಿದ ಸ್ಥಳೀಯರು ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಹೋದರೂ ಅವರು ನಮಗೆ ನ್ಯಾಯ ಕೊಡಿಸಲಿಲ್ಲ. ನಗರ ಪೊಲೀಸ್ ಆಯುಕ್ತರ ಗಮನಕ್ಕೆ ತಂದ ಬಳಿಕ ಎಫ್ಐಆರ್ ದಾಖಲಿಸಲಾಗಿದೆ’
-ನೊಂದ ಸಂತ್ರಸ್ತ ಮಹಿಳೆ