ಅನ್ನಭಾಗ್ಯ ಯೋಜನೆ ತಡವಾಗಿಯಾದರೂ ಜಾರಿ ಮಾಡುತ್ತೇವೆ: ಡಿಸಿಎಂ ಡಿ.ಕೆ ಶಿವಕುಮಾರ್
ನಾವು ಕೊಟ್ಟ ಮಾತಿನಂತೆ ಗೃಹಜ್ಯೋತಿ ಯೋಜನೆ ಜಾರಿಗೊಳಿಸುತ್ತೇವೆ
ಬೆಂಗಳೂರು: ಅನ್ನಭಾಗ್ಯ ಯೋಜನೆ ತಡವಾಗಿಯಾದರೂ ಸರಿ ಜಾರಿ ಮಾಡುತ್ತೇವೆ. ಈ ಯೋಜನೆಯ ಜಾರಿ ವಿಚಾರವಾಗಿ ಬಡವರು, ಫಲಾನುಭವಿಗಳು ಹೋರಾಟ ಮಾಡುತ್ತಿಲ್ಲ. ಬದಲಿಗೆ ಹೊಟ್ಟಿ ತುಂಬಿರುವ ಕೆಲವರು ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಿಂದ ನಮಗೆ ಸಹಾಯವಾಗುತ್ತಿದೆ ಎಂದು ಬಡವರು ಸಂತೋಷದಿಂದ ಇದ್ದಾರೆ. ನಮ್ಮ ಅಕ್ಕ ತಂಗಿಯರು ನಮ್ಮ ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಭೇಟಿ ನೀಡಿ ಧರ್ಮಯಾತ್ರೆ ಮಾಡುತ್ತಿದ್ದಾರೆ.ಅವರ ಖುಷಿ ನೋಡಲಾಗದೇ, ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರೂ ಹೋರಾಟ ಮಾಡುತ್ತೇನೆ ಎಂದು ಸಂಕಟಪಡುತ್ತಿದ್ದಾರೆ. ಯಡಿಯೂರಪ್ಪನವರು ಧರಣಿ ಮಾಡುವುದರಲ್ಲಿ ಸಮರ್ಥರು. ಈಗಲೂ ಅವರು ವಿಧಾನಸಭೆಗೆ ಬಂದು ಹೋರಾಟ ಮಾಡಲಿ ಎಂದರು.
ಅನ್ನಭಾಗ್ಯ ಯೋಜನೆ ಜಾರಿ ವಿಚಾರಪವಾಗಿ ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಮಾತನಾಡಲಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಈ ವಿಚಾರವಾಗಿ ಮಾತನಾಡಿದ್ದು, ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರ ಜತೆ ಮಾತನಾಡುವ ಭರವಸೆ ನೀಡಿದ್ದಾರೆ ಎಂದು ಡಿಕೆಶಿ ತಿಳಿಸಿದರು.
ವಿದ್ಯುತ್ ಬೆಲೆ ಏರಿಕೆ ವಿರುದ್ಧ ಹೋರಾಟದ ಬಗ್ಗೆ ಕೇಳಿದಾಗ, ‘ನಾವು ಎಲ್ಲಿ ವಿದ್ಯುತ್ ಬೆಲೆ ಏರಿಕೆ ಮಾಡಿದ್ದೇವೆ? ಅವರದೇ ಸರ್ಕಾರ ಇದ್ದಾಗ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ಚುನಾವಣೆ ಫಲಿತಾಂಶ ಬರುವುದಕ್ಕೂ ಮುನ್ನವೇ ಅವರು ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ ಪರಿಷ್ಕರಣ ಸಮಿತಿ ಬೆಲೆ ನಿಗದಿಯಲ್ಲಿ ಸ್ವಂತ ಅಧಿಕಾರ ಹೊಂದಿದೆ ಎಂದರು.
ಬಿಜೆಪಿಯವರು ಎಷ್ಟು ಹೊಸ ಬಿಲ್ ಗಳನ್ನು ಸೃಷ್ಟಿಸಿ ಹಣ ನೀಡಿದ್ದಾರೆ. ಸಾವಿರಾರು ಕೋಟಿ ನೀಡಲಾಗಿದೆ. ಈ ವಿಚಾರಗಳು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ತಿಳಿದಿದೆ. ರಾಜ್ಯದಲ್ಲಿ ವಿದ್ಯುತ್ ಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ. ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬೇರೆ ರಾಜ್ಯಗಳಿಗೆ ನೀಡಿರುವ ಬಗ್ಗೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇಲ್ಲದೆ 3500 ಕೋಟಿ ಮೊತ್ತದ ವಿದ್ಯುತ್ ಹೇಗೆ ಮಾರಲಾಯಿತು? ಎಂದು ಪ್ರಶ್ನಿಸಿದರು.
ಕುಮಾರಣ್ಣ ಅವರು ಮಾತನಾಡಲಿ, ನಾನು ಅವರ ಸಲಹೆ ಪಡೆಯುತ್ತೇನೆ. ವಿದ್ಯುತ್ ನಿಗಮದವರು ಜನವರಿಯಿಂದ ಇದನ್ನು ಜಾರಿಗೆ ಮುಂದಾಗಿದ್ದು, ಇದರಿಂದ ವಿದ್ಯುತ್ ಬಿಲ್ ಹೆಚ್ಚಾಗಿ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಚಿವರು, ನಾವು ಕೂತು ಚರ್ಚೆ ಮಾಡಿ ತೀರ್ಮಾನ ಮಾಡಿ ಪರಿಹಾರ ನೀಡುತ್ತಾರೆ. ನಾವು ಕೊಟ್ಟ ಮಾತಿನಂತೆ ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತೇವೆ’ ಎಂದು ತಿಳಿಸಿದರು.