ಪಂಚಾಯತ್ ಚುನಾವಣೆಯಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ.
ರಾಜ್ಯ ಚುನಾವಣಾ ಆಯೋಗವನ್ನು (ಎಸ್ಇಸಿ) ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. "ಚುನಾವಣೆಗಳನ್ನು ನಡೆಸುವುದು ಹಿಂಸಾಚಾರಕ್ಕೆ ಪರವಾನಗಿಯಾಗುವುದಿಲ್ಲ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಜವಾಬ್ದಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪಂಚಾಯತ್ ಚುನಾವಣೆಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವ ಕುರಿತು ಕಲ್ಕತ್ತಾ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಪಶ್ಚಿಮ ಬಂಗಾಳ ಸರಕಾರ ಹಾಗೂ ಚುನಾವಣಾ ಸಂಸ್ಥೆ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.
"ಹೈಕೋರ್ಟ್ ಆದೇಶದಲ್ಲಿ ಯಾವುದೇ ಹಸ್ತಕ್ಷೇಪ ಅಗತ್ಯವಿಲ್ಲ. ರಾಜ್ಯದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಬಹುದು. ಪಂಚಾಯತ್ ಚುನಾವಣೆಯಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವ ಹೈಕೋರ್ಟ್ ಆದೇಶದಲ್ಲಿ ಯಾವುದೇ ತಪ್ಪಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ