ತುಮಕೂರು ಚಿನ್ನೇನಹಳ್ಳಿ ಕಲುಷಿತ ನೀರು ಸೇವನೆ ಪ್ರಕರಣ | ಎಂಜನಿಯರ್, ಪಂಚಾಯತಿ ಕಾರ್ಯದರ್ಶಿ, ನೀರು ಸರಬರಾಜು ಸಿಬ್ಬಂದಿ ಅಮಾನತು
ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 98 ಜನರು ಅಸ್ವಸ್ತರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಧುಗಿರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅಧಿಕಾರಿಗಳು, ನೀರಿನ ಸೇವನೆ ಮತ್ತು ಸೇವಿಸಿರುವ ಆಹಾರದಿಂದಾಗಿ ಒಟ್ಟು 98 ಜನರು ಅಸ್ವಸ್ತರಾಗಿದ್ದು, ಅದರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ 39 ಜನರು ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಸ್ಥಳದಲ್ಲಿಯೇ ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವಿದೇಶ ಪ್ರವಾಸದಲ್ಲಿರುವ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಚಿನ್ನೇನಹಳ್ಳಿ ಗ್ರಾಮದ ಸಾರ್ವಜನಿಕರ ಆರೋಗ್ಯದ ಬಗ್ಗೆ ತೀವ್ರ ನಿಗಾ ಇರಿಸಲು ಹಾಗೂ ಪರ್ಯಾಯ ಶುದ್ಧ ನೀರಿನ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ.
ಸಚಿವರ ಸೂಚನೆಯ ಮೇರೆಗೆ ಚಿನ್ನೇನಹಳ್ಳಿ ಗ್ರಾಮದ ಶಾಲೆಯಲ್ಲಿಯೇ 6 ಹಾಸಿಗೆಗಳ ತುರ್ತು ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಾದ ಎಲ್ಲಾ ಚಿಕಿತ್ಸೆಗಳನ್ನು ನೀಡಲು ವೈದ್ಯಕೀಯ ಸಿಬ್ಬಂದಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಚಿನ್ನೇನಹಳ್ಳಿ ಗ್ರಾಮದಲ್ಲಿ ಇರುವ ಕೊಳವೆ ಬಾವಿಗಳು ಮತ್ತು ನೀರಿನ ಜಲಸಂಗ್ರಹಗಳಿಂದ ಸರಬರಾಜು ಮಾಡುತ್ತಿದ್ದ ನೀರನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದ್ದು, ಪ್ರಸಕ್ತ 2 ಟ್ಯಾಂಕರ್ ಗಳ ಮೂಲಕ ಗ್ರಾಮಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮದಲ್ಲಿರುವ ಎಲ್ಲ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ, ಪ್ರಾಥಮಿಕ ಹಂತದಲ್ಲಿ ಪರೀಕ್ಷಿಸಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.
ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿರುವ ಪ್ರಕರಣವು ವಿಷಾದನೀಯವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಧುಗಿರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಶಿಸ್ತು ಕ್ರಮ ಕಾಯ್ದಿರಿಸಿ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.