ತುಮಕೂರು | ಸೋಮಣ್ಣ ಉಪಸ್ಥಿತಿಯ ಮೈತ್ರಿ ಸಭೆಯಲ್ಲಿ ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
ತುಮಕೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಏರ್ಪಡಿಸಿದ್ದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದ ಘಟನೆ ಇಂದು ನಡೆದಿದೆ.
ತುರುವೇಕೆರೆ ಪಟ್ಟಣದಲ್ಲಿ ಮಾಜಿ ಶಾಸಕ ಮಸಾಲೆ ಜಯರಾಮ್ ಅವರ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲೆ ಜಯರಾಮ್ ಒಟ್ಟಗೆ ಕುಳಿತು ಸಭೆ ನಡೆಸಿಕೊಟ್ಟಿರುವುದು ವಿಶೇಷವಾದರೆ, ಸಭೆಯಲ್ಲಿ ಮಾತನಾಡಿದ ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ 2018ರ ಚುನಾವಣೆಯಲ್ಲಿ ನನ್ನ ಸೋಲಿಗೆ ವಿಶ್ವನಾಥ್ ಎಂಬ ಸಂಘ ಪರಿವಾರದ ಕಾರ್ಯಕರ್ತ ಕಾರಣರಾಗಿದ್ದಾರೆ ಎಂದು ಬಹಿರಂಗವಾಗಿಯೇ ಆರೋಪಿಸಿದ್ದು, ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.
ಶಾಸಕ ಎಂ.ಟಿ.ಕೃಷ್ಣಪ್ಪ ನಂತರ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡುತಿದ್ದ ವೇಳೆ ಎಂ.ಟಿ.ಕೃಷ್ಣಪ್ಪ ಅವರ ಆರೋಪಕ್ಕೆ ಉತ್ತರ ನೀಡಲು ಮುಂದಾದ ವಿಶ್ವನಾಥ್ ಅವರನ್ನು ಸೋಮಣ್ಣ ತಡೆದರು. ಆದರೆ ನಾನು ಪಕ್ಷವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಸಮರ್ಥನೆ ಮಾಡಲು ಮುಂದಾದಾಗ ಎರಡು ಪಕ್ಷದ ಕಾರ್ಯಕರ್ತರ ನಡುವೆ ಏರು ದ್ವನಿಯಲ್ಲಿಯೇ ಮಾತಿನ ಚಕಮಕಿ ನಡೆಯಿತು. ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವೇದಿಕೆಯ ಮೇಲೆ ಮಾತಿನ ಚಕಮಕಿ ನಡೆದಿದ್ದು, ಅಂತಿಮವಾಗಿ ಮಾಜಿ ಶಾಸಕ ಮಸಾಲೆ ಜಯರಾಂ ಅವರು ಎರಡು ಕಡೆಯ ಕಾರ್ಯಕರ್ತರನ್ನು ಸಮಾಧಾನ ಪಡಿಸುವ ಮೂಲಕ ಸಭೆ ನಡೆಯಲು ಅನುವು ಮಾಡಿಕೊಟ್ಟರು.