ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ: ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ತುಮಕೂರು ಮೂಲದ ಚಂದ್ರ ಆರ್ಯ

ತುಮಕೂರು: ಜಿಲ್ಲೆಯ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿರುವ ಚಂದ್ರ ಆರ್ಯ ಅವರು ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಬಳಿಕ ಅವರು ಕನ್ನಡದಲ್ಲಿಯೇ ಮಾತನಾಡಿರುವುದು ವರದಿಯಾಗಿದೆ. ಚಂದ್ರ ಆರ್ಯ ಅವರು ಈ ಹಿಂದೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು.
ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ, ಸಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು, ಸುಮಾರು ಐದು ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ ಎಂದಿದ್ದಾರೆ.
ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು ಎಂಬುವುದನ್ನು ಉಲ್ಲೇಖಿಸಿದ ಚಂದ್ರ ಆರ್ಯ ಅವರು, ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್ಕುಮಾರ್ ಹಾಡಿರುವ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಭಾವಗೀತೆಯ ಸಾಲುಗಳನ್ನು ಹೇಳುವ ಮೂಲಕ ಮಾತು ಮುಗಿಸಿದರು.