ಉಡುಪಿ ಜಿಲ್ಲೆಯಲ್ಲಿ ಮಳೆಗೆ 28 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು, ಜು.26: ಉಡುಪಿ ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು.
ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ. ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ನುಡಿದರು.
ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಸಚಿವರು ತಿಳಿಸಿದರು.