ನ.29ರಿಂದ ಮಂಗಳೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್
ಉಡುಪಿ: ಮಂಗಳೂರು ವಿವಿ ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಶುಕ್ರವಾರ ಹಾಗೂ ಶನಿವಾರ ಉಡುಪಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪುರುಷ ಅಥ್ಲೀಟ್‌ಗಳು ಸೈಂಟ್ ಫಿಲೋಮಿನಾ ಕಾಲೇಜು ಸಂಸ್ಥೆ ಟ್ರೋಫಿ ಹಾಗೂ ಮಹಿಳಾ ಅಥ್ಲೀಟ್‌ಗಳು ಅಕಾಡೆಮಿ ಆಪ್ ಜನರಲ್ ಎಜ್ಯುಕೇಷನ್ ಟ್ರೋಫಿಗಾಗಿ ಎರಡು ದಿನಗಳ ಕಾಲ ವಿವಿಧ ಕ್ರೀಡಾಸ್ಪರ್ಧೆಗಳಲ್ಲಿ ಸೆಣಸಾಟ ನಡೆಸುವರು. ಅಲ್ಲದೇ ಈ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮೊದಲೆರಡು ಸ್ಥಾನಗಳನ್ನು ಪಡೆಯುವ ಕ್ರೀಡಾಪಟುಗಳು ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ ಕೂಟದಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸುವ ಅರ್ಹತೆ ಪಡೆಯಲಿದ್ದಾರೆ.
ಕ್ರೀಡಾಕೂಟವನ್ನು ಮಂಗಳೂರು ವಿವಿ, ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಹಾಗೂ ಲಿಯೋ ಡಿಸ್ಟ್ರಿಕ್ ಉಡುಪಿ ಸಂಯುಕ್ತವಾಗಿ ಹಮ್ಮಿಕೊಂಡಿವೆ.
ಕ್ರೀಡಾಕೂಟವನ್ನು ಶುಕ್ರವಾರ ಬೆಳಗ್ಗೆ 9.30ಕ್ಕೆ ಉದ್ಯಮಿ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿಯ ಅಧ್ಯಕ್ಷ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದು, ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಎಜ್ಯುಕೇಶನ್ ಫೌಂಡೇಷನ್‌ನ ಅಧ್ಯಕ್ಷ ಡಾ.ಮೋಹನ ಆಳ್ವ, ಮಲ್ಪೆಯ ಉದ್ಯಮಿ ಆನಂದ ಸುವರ್ಣ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್‌ನ ಅಧ್ಯಕ್ಷ ಹರಿಪ್ರಸಾದ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭ ನ.೩೦ರ ಸಂಜೆ ೪ಗಂಟೆಗೆ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕ್ರೀಡಾಕೂಟದ ಸಂಯೋಜಕರೂ ಆಗಿರುವ ಡಾ.ರೋಶನ್‌ಕುಮಾರ್ ಶೆಟ್ಟಿ ತಿಳಿಸಿದ್ದಾರೆ.