ಜು.5ರಂದು ಬ್ರಹ್ಮಾವರ, ಬೈಂದೂರು, ಕುಂದಾಪುರ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಉಡುಪಿ, ಜು.4: ಜಿಲ್ಲೆಯ ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.5ರ ಶುಕ್ರವಾರ ಈ ಮೂರು ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮಾತ್ರವಲ್ಲದೇ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ತನ್ನ ಆದೇಶದಲ್ಲಿ ತಿಳಿಸಿದ್ದಾರೆ.
ಕಾಲೇಜುಗಳಲ್ಲಿ ಪಾಠಪ್ರವಚನದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ಬಂದು, ಯಾವುದೇ ಅಪಾಯಗಳಿಲ್ಲದೇ ಮನೆಗೆ ತೆರಳಿರುವ ಬಗ್ಗೆ ಗಮನ ಹರಿಸಬೇಕು ಎಂದು ಕಾಲೇಜುಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟವರಿಗೆ ಸಾಮಾನ್ಯ ಸೂಚನೆಗಳನ್ನು ಸಹ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.