ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್, ಬಣ್ಣದ ವಿಗ್ರಹಗಳ ವಿಸರ್ಜನೆ ನಿಷೇಧ
ಉಡುಪಿ, ಆ.29: ಜಿಲ್ಲೆಯಲ್ಲಿ ಸ್ವರ್ಣಗೌರಿ ಹಾಗೂ ವಿನಾಯಕ ಚತುರ್ಥಿ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ, ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುತ್ತಿದ್ದು, ಇದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟಾಗಿ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುವುದರ ಜೊತೆಗೆ ಸಾರ್ವಜನಿಕರ ಆರೊಗ್ಯಕ್ಕೂ ಧಕ್ಕೆ ಉಂಟಾಗುತ್ತದೆ.
ಆದ್ದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯು ಈ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲಮಾಲಿನ್ಯ ಕಾಯ್ದೆ ಅನ್ವಯ ಯಾವುದೇ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಸೆಕ್ಷನ್ 1860 ರ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರು ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ ಅಥವಾ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ತದನಂತರ ಗೌರಿಗಣೇಶ ಮೂರ್ತಿಗಳನ್ನು ನಗರಸಭೆ ಹಾಗೂ ಪುರಸಭೆ ವತಿಯಿಂದ ನಿಗದಿ ಪಡಿಸಿರುವ ಸ್ಥಳಗಳಲ್ಲಿ ವಿಸರ್ಜಿಸಬೇಕು. ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸಗಳಾದ ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಿ, ಅವುಗಳನ್ನು ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ ಹಾಗೂ ಪುರಸಭೆಯ ಕಸ ಸಂಗ್ರಹ ವಾಹನಕ್ಕೆ ನೀಡಬೇಕು.
ಸಾರ್ವಜನಿಕವಾಗಿ ನಡೆಸುವ ಮೂರ್ತಿಯ ಉತ್ಸವದ ಚಪ್ಪರಕ್ಕೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಉಪಯೋಗಿಸದೇ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು. ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲಸಂಪನ್ಮೂಲ ಗಳನ್ನು ಸಂರಕ್ಷಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.