ಕಾಂಗ್ರೆಸ್ ನತ್ತ ಡಿವಿಎಸ್ ಚಿತ್ತ: ಉಡುಪಿ –ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕೆ?
ಉಡುಪಿ, ಮಾ.19: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ, ಹಿರಿಯ ಬಿಜೆಪಿ ನಾಯಕ ಡಿ.ವಿ.ಸದಾನಂದ ಗೌಡ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳಿಬರುತ್ತಿದೆ.
ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಬಿಜೆಪಿ ಸಂಸದರಾಗಿರುವ ಸದಾನಂದ ಗೌಡರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದ್ದು, ಅವರ ಬದಲು ಉಡುಪಿ –ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರನ್ನು ಇಲ್ಲಿ ಕಣಕ್ಕಿಳಿಸಲಾಗಿದೆ. ಇದರಿಂದ ಡಿವಿಎಸ್ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಮಧ್ಯೆ ಡಿವಿಎಸ್ ಕಾಂಗ್ರೆಸ್ ಸೇರಲಿದ್ದಾರೆ, ಉಡುಪಿ –ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
2009ರ ಲೋಕಸಭಾ ಚುನಾವಣೆಯಲ್ಲಿ ಉಡುಪಿ –ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸದಾನಂದ ಗೌಡರು ಈ ಬಾರಿ ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ ಎನ್ನಲಾಗುತ್ತಿದೆ.
ಈ ನಡುವೆ ಡಿವಿಎಸ್ ಹೆಸರು ಮೈಸೂರು - ಕೊಡಗು ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲೂ ಚಾಲ್ತಿಯಲ್ಲಿದೆ. ಈ ಮೂರರಲ್ಲಿ ಒಂದು ಕ್ಷೇತ್ರದಿಂದ ಡಿವಿಎಸ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದೂ ಹೇಳಲಾಗುತ್ತಿದೆ.
ಈ ಎಲ್ಲ ಅಂತೆಕಂತೆಗಳ ನಡುವೆಯೇ 'ನನ್ನ ಮುಂದಿನ ನಡೆಯೇನು ಎಂಬುದನ್ನು ಮಂಗಳವಾರ (ಮಾ.19ರಂದು) ಪ್ರಕಟಿಸುವೆ ಎಂದು ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.