ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ಗೆ ಸೇರ್ಪಡೆ
ಉಡುಪಿ, ಮಾ.12: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಇಂದು (ಮಾರ್ಚ್ 12) ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅವರು ಕಾಂಗ್ರೆಸ್ ಗೆ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
''ಕರಾವಳಿಯ ಅಭಿವೃದ್ಧಿಯ ಗುರಿ ಸಾಧನೆಗಾಗಿ ರಾಜಕೀಯದಲ್ಲಿ ಮತ್ತೆ ಸಕ್ರಿಯನಾಗಲು ನಿರ್ಧರಿಸಿದ್ದೇನೆ. ಅದರಂತೆ ಮಾ.12ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿ ಮುಂದಿನ ರಾಜಕೀಯ ನಡೆಯನ್ನು ನಿರ್ಧರಿಸಲು ನಿರ್ಣಯಿಸಿದ್ದೇನೆ'' ಎಂದು ಕೆ.ಜಯಪ್ರಕಾಶ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ ತಾಲೂಕಿನ ಕೊರ್ಗಿ ಮೂಲದ ಜಯಪ್ರಕಾಶ್ ಹೆಗ್ಡೆ ನಿರಂತರ 14 ವರ್ಷಗಳ ಕಾಲ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸತತವಾಗಿ ಜಯ ಗಳಿಸಿದ್ದರು. ಕ್ಷೇತ್ರ ಪುನರ್ವಿಂಗಡನೆಯ ಕಾರಣಕ್ಕೆ ಬ್ರಹ್ಮಾವರ ಕ್ಷೇತ್ರ ಮಾಯವಾದಾಗ 2008ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಹೆಗ್ಡೆ, ಕುಂದಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. 2009ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಡಿ.ವಿ.ಸದಾನಂದ ಗೌಡರ ವಿರುದ್ಧವಾಗಿ ಸ್ಪರ್ಧಿಸಿ ಸೋಲುಂಡಿದ್ದರು. ಆದರೆ 2012ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಆ ನಂತರ ನಡೆದ ಪರಿಷತ್ ಚುನಾವಣೆಯ ಸಮಯದಲ್ಲಿ ಉಂಟಾದ ಭಿನ್ನಾಭಿಪ್ರಾಯದ ಕಾರಣಕ್ಕಾಗಿ ಕಾಂಗ್ರೆಸ್ ತೊರೆದು 2017ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಹೆಗ್ಡೆಯವರನ್ನು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಸರಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆಯ ಹಿನ್ನಲೆಯಲ್ಲಿ ಪ್ರಸಕ್ತ ಕಾಂಗ್ರೆಸ್ ಆಡಳಿತದ ಅವಧಿಯಲ್ಲೂ ಹೆಗ್ಡೆಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರಿಕೆ ಮಾಡಿದ್ದರು. ಫೆಬ್ರವರಿ ಅಂತ್ಯದಲ್ಲಿ ಹೆಗ್ಡೆ ತಮ್ಮ ತಂಡದ ಜೊತೆ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಿದ್ದರು.
ಜಯಪ್ರಕಾಶ್ ಹೆಗ್ಡೆ ಇದೀಗ ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ.