ಉಡುಪಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ
ಉಡುಪಿ: ಜಿಲ್ಲಾಡಳಿತದ ವತಿಯಿಂದ ಆ.೧೫ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡನ ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್‌ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಕರ್ಷಕ ಪಥ ಸಂಚಲನ ಆಯೋಜಿಸುವಂತೆ ಅವರು ಸಂಬಂಧಿತರಿಗೆ ಸೂಚಿಸಿದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆರಂಭಕ್ಕೆ ಮೊದಲು ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ, ಪಥ ಸಂಚಲನ ವೀಕ್ಷಣೆ ಹಾಗೂ ಸ್ವಾತ್ರಂತ್ರ್ಯೋತ್ಸವ ಸಂದೇಶದ ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಪ್ರಮುಖ ಗಣ್ಯರು, ಸಂಘ ಸಂಸ್ಥೆಗಳ ಅಧ್ಯಕ್ಷರುಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತು ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಸಮಿತಿಗಳು ತಮಗೆ ನೀಡಿರುವ ಜವಾಬ್ದಾರಿಯನ್ನು ಪರಸ್ಪರ ಸಮನ್ವಯದಿಂದ, ಸಮರ್ಪಕವಾಗಿ ನಿರ್ವಹಿಸಿ, ಕಾರ್ಯಕ್ರಮದಲ್ಲಿ ಲೋಪಗಳಾದಂತೆ ಎಚ್ಚರವಹಿಸುವಂತೆ ನಿರ್ದೇಶನಗಳನ್ನು ನೀಡಿದರು.
ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮ ದಲ್ಲಿ ತಪ್ಪದೇ ಭಾಗವಹಿಸುವಂತೆ ಅವರು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತ ರಿದ್ದರು.