ಮನೆ-ಮನೆಗಳಲ್ಲಿ ರಾಷ್ಟ್ರಧ್ವಜ ಹಾರಾಡಲಿ: ಉಡುಪಿ ಡಿಸಿ ವಿದ್ಯಾಕುಮಾರಿ
ಡಾ.ವಿದ್ಯಾ ಕುಮಾರಿ
ಉಡುಪಿ, ಆ.13: ಸರಕಾರ ಸೂಚನೆಯಂತೆ ನನ್ನ ಮಣ್ಣು-ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ.15ರವರೆಗೆ ಜಿಲ್ಲೆಯ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶ ಪ್ರೇಮ ಮೂಡಿಸುವಂತಾಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದ್ದಾರೆ.
ಈ ಅಭಿಯಾನದಲ್ಲಿ ಜಿಲ್ಲೆಯ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ರಾಷ್ಟ್ರಧ್ವಜ ಹಾರಿಸುವ ಸಂದರ್ಭದಲ್ಲಿ ಧ್ವಜ ಶಿಷ್ಟಾಚಾರ ಪಾಲನೆ ಮಾಡಿ, ಹಾರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಜಿಲ್ಲೆಗೆ ರಾಷ್ಟ್ರಧ್ವಜಗಳನ್ನು ಹಂಚಿಕೆ ಮಾಡಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ರಾಷ್ಟ್ರಧ್ವಜ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ರಾಷ್ಟ್ರಧ್ವಜಕ್ಕೆ 25.50ರೂ. ದರ ನಿಗದಿಪಡಿ ಸಲಾಗಿದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರೂ ಇದರಲ್ಲಿ ಭಾಗವಹಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.