ಉಡುಪಿ: ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ; ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ, ನ.17: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಕೊಲೆ ನಡೆದ ನೇಜಾರಿನ ಮನೆಗೆ ಭೇಟಿ ನೀಡಿ ಮೃತ ಹಸೀನಾರ ಪತಿ ನೂರ್ ಮುಹಮ್ಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರಿಗೆ ಸಾಂತ್ವನ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಂದ ವ್ಯಕ್ತಿ ರಾಕ್ಷಸ ಕೃತ್ಯ ಎಸಗಿದ್ದಾನೆ. ಮೃತರ ಕುಟುಂಬದ ಜೊತೆ ಸರಕಾರ ಇದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇವೆ ಎಂದರು.
ಉಡುಪಿ ಜಿಲ್ಲೆ ಶಾಂತಿ ಪ್ರಿಯ ಜಿಲ್ಲೆ. ಇಂತಹ ಜಿಲ್ಲೆಯಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲ ರೀತಿಯಲ್ಲೂ ಕಾನೂನು ಸುವ್ಯವಸ್ಥೆ ಕಾಪಾಡಲಾಗುವುದು. ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.
ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಕಾರದಿಂದ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆಯೋ ಅದನ್ನು ಮಾಡಲಾಗುವುದು ಎಂದು ಅವರು ಹೇಳಿದರು.
ನಾನು ಬೆಳಗಾವಿಯಲ್ಲಿದ್ದರೂ ಸಂತ್ರಸ್ತ ಕುಟುಂಬದ ಜೊತೆಗೆ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಟರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಮೃತ ಮಹಿಳೆಯ ಸಹೋದರರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೆ. ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಎಲ್ಲಿ ಇದ್ದರೂ ನಿಬಾಯಿಸುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಎಚ್.ಪ್ರಸನ್ನ, ಕಾಂಗ್ರೆಸ್ ಮುಖಂಡರಾದ ಗೋಪಾಲ ಪೂಜಾರಿ, ಮುನಿಯಾಲು ಉದಯ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಎಂ.ಎ.ಗಫೂರ್ ಮೊದಲಾದವರು ಉಪಸ್ಥಿತರಿದ್ದರು.
ಸೈಕೋ ಕಿಲ್ಲರ್
‘ಆರೋಪಿ ಸೈಕೋ ರೀತಿ ಇದ್ದಾನೆ. ಆತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಸೈಕೋ ಕಿಲ್ಲರ್ ರೀತಿ ಬಂದು ಕೇವಲ 20 ನಿಮಿಷಗಳಲ್ಲಿ ಈ ಕೃತ್ಯ ಎಸಗಿದ್ದಾನೆ ಅಂದರೆ ಆತನ ಮನಸ್ಥಿತಿ ಯಾವ ರೀತಿ ಇರಬಹುದು’
-ಲಕ್ಷ್ಮೀ ಹೆಬ್ಬಾಳಕರ್, ಸಚಿವರು
ವಿಶೇಷ ಪಿಪಿಯಾಗಿ ನ್ಯಾಯವಾದಿ ಶಿವಪ್ರಸಾದ್ ಆಳ್ವರನ್ನು ನೇಮಿಸಲು ನೂರ್ ಮುಹಮ್ಮದ್ ಆಗ್ರಹ
ನನ್ನ ಪತ್ನಿ ಮಕ್ಕಳ ಹತ್ಯಾಕಾಂಡ ಪ್ರಕರಣವನ್ನು ವಿಶೇಷ ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಿ ತ್ವರಿತ ನ್ಯಾಯದಾನ ನೀಡಬೇಕು ಮತ್ತು ಆ ಮೂಲಕ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ನೂರ್ ಮುಹಮ್ಮದ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಂದು ಮನವಿ ಸಲ್ಲಿಸಿದರು.
ಗೃಹ ಇಲಾಖೆ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸುವುದರ ಮೂಲಕ ಈ ಕೃತ್ಯವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಬೇಕು. ಹಿರಿಯ ನ್ಯಾಯವಾದಿ ಶಿವಪ್ರಸಾದ್ ಆಳ್ವ ಅವರನ್ನು ವಿಶೇಷ ಸರಕಾರಿ ಅಭಿಯೋಜಕರ ನ್ನಾಗಿ ನೇಮಕ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
‘ಮರಣದಂಡನೆ ಶಿಕ್ಷೆಯಾಗಲಿ’
ಇಡೀ ಕುಟುಂಬವನ್ನು ಸರ್ವನಾಶ ಮಾಡಿದ ಆರೋಪಿ ಪ್ರವೀಣ್ ಚೌಗುಲೆಗೆ ಮರಣದಂಡನೆ ಶಿಕ್ಷೆ ಆಗಬೇಕು ಎಂಬುದು ನಮ್ಮ ಮುಖ್ಯ ಬೇಡಿಕೆಯಾಗಿದೆ ಎಂದು ಮೃತ ಹಸೀನಾರ ಸಹೋದರ ಅಶ್ರಫ್ ಒತ್ತಾಯಿಸಿದರು.
ನಮಗೆ ಶೀಘ್ರ ನ್ಯಾಯ ಸಿಗಲು ವಿಶೇಷ ತ್ವರಿತ ನ್ಯಾಯಾಲಯವನ್ನು ಸ್ಥಾಪಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಅದಕ್ಕೆ ಅವರು ನ್ಯಾಯ ಒದಗಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಅವರು ತಿಳಿಸಿದರು.