ಕೆಲಸಕ್ಕೆ ಕಾರ್ಮಿಕರ ನೇಮಕಕ್ಕೆ ಮುನ್ನ ಸೂಕ್ತ ದಾಖಲೆ ಪಡೆಯಬೇಕು: ಉಡುಪಿ ಡಿಸಿ ವಿದ್ಯಾಕುಮಾರಿ
ಉಡುಪಿ: ಕೆಲಸಕ್ಕೆ ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಮೊದಲು ಪ್ರತಿಯೊಬ್ಬ ಮಾಲಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಾಲಿಕ ವಾಸಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದು ಕೊಳ್ಳಬೇಕು. ಹಾಗೂ ಈ ವರದಿಗಳನ್ನು ಸಂಬಂಧಿಸಿದ ಸರಕಾರಿ ಕಚೇರಿಗಳಿಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಂಗಳವಾರ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಕ್ರಮ ಬಾಂಗ್ಲಾದೇಶೀಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರಿಕರಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಮೂಲಕ ಜಿಲ್ಲೆಯ ಜನರನ್ನು ಜಾಗೃತ ಗೊಳಿಸುವ ಕುರಿತ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಬಾಂಗ್ಲಾ ದೇಶದ ನಾಗರಿಕರು ಜೀವನೋಪಾಯಕ್ಕಾಗಿ ಅಕ್ರಮವಾಗಿ ಜಿಲ್ಲೆಯ ವಿವಿದೆಡೆಗಳಲ್ಲಿ ವಿವಿಧ ಕೆಲಸ ಕಾರ್ಯಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಅಲ್ಲದೇ ಸ್ಥಳೀಯವಾಗಿ ಕೆಲವು ದಾಖಲೆ ಗಳನ್ನು ಸೃಷ್ಟಿಸಿಕೊಂಡು ಕಾನೂನು ಬಾಹಿರವಾಗಿ ವಾಸವಾಗಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎಚ್ಚರ ವಹಿಸಲು ನಿರ್ದೇಶನ ನೀಡಿದೆ ಎಂದು ಅವರು ವಿವರಿಸಿದರು.
ಕಾರ್ಮಿಕ, ಕೈಗಾರಿಕೆ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಗ್ಗೆ ಸಮಗ್ರವಾಗಿ ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಸಹ ಇದಕ್ಕೆ ಸಹಕರಿಸಬೇಕು ಎಂದರು.
ಮೀನುಗಾರಿಕೆ ಚಟುವಟಿಕೆ, ಕಟ್ಟಡಗಳ ನಿರ್ಮಾಣ ಸಂಸ್ಥೆಗಳು, ದೊಡ್ಡ ರೈತರು, ಅಪಾರ್ಟ್ಮೆಂಟ್ನವರು ಸೇರಿದಂತೆ ಹಲವು ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳುವ ಪ್ರತಿಯೊಬ್ಬ ಮಾಲಕರು ತಮ್ಮಲ್ಲಿ ಕೆಲಸಕ್ಕೆ ನಿಯೋಜನೆ ಗೊಂಡಿರುವ ಕಾರ್ಮಿಕರ ಆಧಾರ್ ಸೇರಿದಂತೆ ಎಲ್ಲಾ ಅಧಿಕೃತ ಗುರುತಿನ ಚೀಟಿಗಳನ್ನು ತಪ್ಪದೇ ಪಡೆಯಬೇಕು. ಇವುಗಳ ಮಾಹಿತಿ ಯನ್ನು ಸಂಬಂಧಿಸಿದ ಇಲಾಖೆಗಳಿಗೆ ಕಡ್ಡಾಯವಾಗಿ ನೀಡಬೇಕು ಎಂದರು.
ಈ ದಾಖಲೆಗಳನ್ನು ಪಡೆದ ಅಧಿಕಾರಿಗಳು ಇವುಗಳನ್ನು ಪಡೆದ ಸೂಕ್ಷ್ಮ ವಾಗಿ ಪರಿಶೀಲನೆ ಮಾಡಬೇಕು. ಇವುಗಳ ಜೊತೆಗೆ ಅವರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಆಗ್ಗಿಂದಾಗ್ಗೆ ಅನೀರಿಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಬೇಕು ಎಂದರು.
ಹೊರ ರಾಜ್ಯಗಳಿಂದ ಮೀನುಗಾರಿಕೆ ಚಟುವಟಿಕೆಗಳಿಗೆ ಕಾನೂನು ಬಾಹಿರವಾಗಿ ಮೀನುಗಾರಿಕಾ ಬೋಟ್ಗಳು ಬಂದಂತ ಸಂದರ್ಭದಲ್ಲಿ ಕಾನೂನಿನ ಅನ್ವಯ ಅವರ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇದನ್ನು ಮಾಡದೇ ಇದ್ದಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಸರಕಾರಕ್ಕೆ ವರದಿ ಸಲ್ಲಿಸುವುದಾಗಿ ಅವರು ತಿಳಿಸಿದರು.
ಮನೆ ಮಾಲಕರುಗಳು ತಮ್ಮ ಮನೆಗಳನ್ನು ಬಾಡಿಗೆಗೆ ನೀಡುವ ಮುನ್ನ ಸೂಕ್ತ ದಾಖಲೆಗಳನ್ನು ಪಡೆದುಕೊಳ್ಳುವುದು ಸೂಕ್ತ ಎಂದ ಅವರು, ಕಾರ್ಮಿಕ, ಉದ್ಯೋಗ ಪರ ಸಂಘಟನೆಗಳು ಸಹ ಅಕ್ರಮ ವಿದೇಶಿ ವಲಸಿಗರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.
ಮೀನುಗಾರಿಕಾ ಬಂದರುಗಳಲ್ಲಿ ನಿಗದಿತ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಆಳವಡಿಸಬೇಕು ಎಂದು ಜಿಲ್ಲಾಧಿಕಾರಿ ಗಳು ಬಂದರು, ಮೀನುಗಾರಿಕೆ ಹಾಗೂ ಸಿಆರ್ಝೆಡ್ ಇಲಾಖಾ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ ಮಾತನಾಡಿ, ವಿವಿಧ ಕೆಲಸ ಗಳಿಗೆ ಕಾರ್ಮಿಕರನ್ನು ನಿಯೋಜಿಸಿಕೊಳ್ಳುವ ಮೊದಲು ಅವರುಗಳ ಪೂರ್ವಾಪರ ಮಾಹಿತಿ ಹಾಗೂ ಅವರ ಗುರುತಿನ ಚೀಟಿಯನ್ನು ಪಡೆದು ಕೊಳ್ಳುವುದರ ಜೊತೆಗೆ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು. ಒಂದೊಮ್ಮೆ ಕಾನೂನು ಬಾಹಿರ ವ್ಯಕ್ತಿಗಳನ್ನು ಕೆಲಸಕ್ಕೆ ತೊಡಗಿಸಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಜೊತೆಗೆ ನೇಮಿಸಿಕೊಂಡ ಮಾಲಕರನ್ನು ಹೊಣೆಗಾರರನ್ನಾಗಿ ಮಾಡಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಆಧಾರ್ ಕಾರ್ಡ್ನ ಮೂಲದ ಕುರಿತು ಪರಿಶೀಲನೆ ಕುರಿತಂತೆ ಪ್ರಾಯೋಗಿಕ ತರಬೇತಿ ನೀಡಲಾಯಿತು.
ಸಭೆಯಲ್ಲಿ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಎಚ್.ಎನ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ವಿವಿಧ ಸಂಘಟಣೆಗಳ-ಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.