ಕಾರ್ಮಿಕರಿಗೆ ಕೆಲಸ ಮಾಡಲು ಸುರಕ್ಷಿತ ವಾತಾವರಣ ಕಲ್ಪಿಸಿ: ಉದ್ಯೋಗದಾತರಿಗೆ ಉಡುಪಿ ಡಿಸಿ ಕರೆ
‘ಕಾರ್ಮಿಕರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ’
ಉಡುಪಿ, ನ.12: ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅವರ ಪರವಾದ ಕಾನೂನುಗಳಿವೆ. ಅವುಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಉದ್ಯೋಗದಾತರು ಸರಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಮಿಕರನ್ನು ನೇಮಿಸಿ ಕೊಳ್ಳಬೇಕು. ಕಾರ್ಮಿಕರ ದುಡಿಮೆಗೆ ಅನುಗುಣವಾಗಿ ಕನಿಷ್ಠ ವೇತನ ಕಾಯಿದೆಯಂತೆ ಸಂಬಳ, ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಇ.ಎಸ್.ಐ, ಪಿಎಫ್, ಹೆಚ್ಚುವರಿ ಕೆಲಸ ಮಾಡಿಸಿಕೊಂಡಲ್ಲಿ ಹೆಚ್ಚುವರಿ ಪೇಮೆಂಟ್ ನೀಡ ಬೇಕು.ಅಲ್ಲದೇ ಕಾರ್ಮಿಕರು ಸುರಕ್ಷತೆಯಿಂದ ಕೆಲಸ ಮಾಡಲು ಸುರಕ್ಷಿತ ವಾತಾವರಣವನ್ನು ಅವರಿಗೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆ ಹಾಗೂ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ, ಕಾರ್ಮಿಕ ಇಲಾಖೆಯಿಂದ ಹಾಗೂ ಇತರೆ ಇಲಾಖೆಗಳಿಂದ ಅನುಷ್ಠಾನ ಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಾರ್ಮಿಕ ಕಾಯ್ದೆಗಳು ಬಲಿಷ್ಠವಾಗಿವೆ.ಇವುಗಳ ಬಗ್ಗೆ ಉದ್ಯೋಗದಾತರಿಗೆ ಕಾನೂನಿನ ಅರಿವು ಮೂಡಿಸಿ, ಆ ಮೂಲಕ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸರಿಯಾಗಿ ನೀಡುವಂತೆ ನೋಡಿಕೊಳ್ಳಿ. ಮಾನವೀಯ ನೆಲೆಯೊಂದಿಗೆ ಕಾನೂನಿನ ಅಡಿಯಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುವ ಬಗ್ಗೆ ತಿಳುವಳಿಕೆ ಮೂಡಿಸಿದಾಗ ಕಾಯಿದೆಗಳು ಪರಿಣಾಮ ಕಾರಿಯಾಗಿ ಅನುಷ್ಠಾನ ಗೊಳ್ಳುತ್ತವೆ ಎಂದವರು ನುಡಿದರು.
ಕಾರ್ಮಿಕ ಇಲಾಖೆಯ ಕಾರ್ಯಚಟುವಟಿಕೆಗಳು ಹಾಗೂ ಯೋಜನೆಗಳ ಬಗ್ಗೆ ಸಂಬಂಧಿಸಿದ ಕಾರ್ಮಿಕರು, ಮಾಲಕರು ಹಾಗೂ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಈ ಕಾರ್ಯಾಗಾರವನ್ನು ಆಯೋಜಿಸಿದ್ದು, ಉದ್ಯೋಗದಾತರು, ಗುತ್ತಿಗೆದಾರರು ಹಾಗೂ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಮಿಕರ ಸುರಕ್ಷತೆಗೆ ಅನುಗುಣವಾಗಿ ಕಾನೂನುಗಳನ್ನು ರೂಪಿಸಿವೆ. ಸರಕಾರದಿಂದ ಕಾರ್ಮಿಕರ ಸರ್ವ ತೋಮುಖ ಅಭಿವೃದ್ಧಿಗೆ ಹಲವು ಸವಲತ್ತುಗಳಿವೆ. ಈ ಬಗ್ಗೆ ಹಲವರಿಗೆ ಅರಿವೇ ಇರುವುದಿಲ್ಲ. ಉದ್ಯೋಗದಾತರು ಹಾಗೂ ಸಂಬಂಧಪಟ್ಟ ಇಲಾಖೆಗಳು ಇವುಗಳನ್ನು ಕಾರ್ಮಿಕರಿಗೆ ತಲುಪಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು. ಉದ್ಯೋಗದಾತರು ಸ್ವ-ಜವಾಬ್ದಾರಿಗಳನ್ನು ಅರಿತು ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು
ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಪ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಮಿ ಕರ ಕಲ್ಯಾಣವನ್ನು ಆದ್ಯತೆಯನ್ನಾಗಿಸಿಕೊಂಡು ಸರಕಾರ ಹಾಗೂ ಇಲಾಖೆಯು ಕಾರ್ಮಿಕರು ಸಬಲರಾಗಿ, ಆರ್ಥಿಕ, ಶೈಕ್ಷಣಿಕ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ಕಾರ್ಮಿಕರ ಹಿತಕಾಯು ವಲ್ಲಿ ಹಾಗೂ ಜನಪರ ಯೋಜನೆಗಳನ್ನು ಸಕಾಲದಲ್ಲಿ ಕಾರ್ಮಿಕರಿಗೆ ತಲುಪಿಸಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ. ಆರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕರು ಹಾಗೂ ಮಾಲಕರ ನಡುವೆ ಉತ್ತಮ ಬಾಂಧವ್ಯ ಇರಬೇಕು. ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಒದಗಿಸಿದಾಗ ಕಾರ್ಮಿಕರು ಹಾಗೂ ಮಾಲಕರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲ. ಉದ್ಯೋಗ ನೀಡಿದಾಗ ಕಾರ್ಮಿಕರ ಅಗತ್ಯ ದಾಖಲೆಗಳನ್ನು ಕಾನೂನಿನ ಪ್ರಕಾರ ನಿರ್ವಹಣೆ ಮಾಡುವುದು ಉದ್ಯೋಗದಾತರ ಜವಾಬ್ದಾರಿ ಎಂದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಕಾರ್ಮಿಕ ಇಲಾಖೆಯಿಂದ ಹಾಗೂ ಇತರೆ ಇಲಾಖೆಗಳಿಂದ ಅನುಷ್ಠಾನ ಗೊಳ್ಳುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ, ಕಾರ್ಮಿಕ ಭವಿಷ್ಯ ನಿಧಿ ಸಂಘಟನೆಯ ಜಿಲ್ಲಾ ಪ್ರಾದೇಶಿಕ ಆಯುಕ್ತ ಸಂದೀಪ್ ಕುಮಾರ್, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಸಹಾಯಕ ನಿರ್ದೇಶಕ ಪ್ರತಾಪ್ ಹೆಚ್ ಎ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ಮತ್ತು ವೈದ್ಯಕೀಯ ಸೇವೆಯ ಆಡಳಿತ ವಿಮಾ ವೈದ್ಯಾಧಿಕಾರಿ ಡಾ. ಹೇಮಂತ್ ಕುಮಾರ್, ಮಂಗಳೂರು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಬಿ.ಆರ್ ಕುಮಾರ್, ಕಾರ್ಮಿಕ ನಿರೀಕ್ಷಕರು, ಗುತ್ತಿಗೆದಾರರು, ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕಿ ಅಮೃತಾ ಸ್ವಾಗತಿಸಿ, ಮಂಜುಳಾ ಜಿ ತೆಕ್ಕಟ್ಟೆ ಕಾರ್ಯ ಕ್ರಮ ನಿರೂಪಿಸಿದರು. ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ವಂದಿಸಿದರು.
‘ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಕಾನೂನುಗಳನ್ನು ಜಾರಿಗೆ ತರುವುದರ ಜೊತೆಗೆ ಅನೇಕ ಸೌಲಭ್ಯ ಗಳನ್ನು ಸಹ ನೀಡುತ್ತಿವೆ. ಇವುಗಳನ್ನು ಎಲ್ಲರೂ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಬೇಕು.
-ಡಾ.ಕೆ.ವಿದ್ಯಾಕುಮಾರಿ, ಉಡುಪಿ ಜಿಲ್ಲಾಧಿಕಾರಿ