ಸ್ವಾವಲಂಬಿ ಬದುಕಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರೇರಣೆ: ಡಾ.ವಿದ್ಯಾಕುಮಾರಿ
ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಅಜ್ಜರಕಾಡು ಡಾ.ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಜಿಲ್ಲಾಮಟ್ಟದ ರೇಂಜರ್ಗಳ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಮಕ್ಕಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಜಿಲ್ಲೆಯಲ್ಲಿ ಐಎಎಸ್, ಐಪಿಎಸ್ ಪರೀಕ್ಷೆ ಬರೆಯುವವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕನಿಷ್ಟ ಐದು ಮಂದಿಯಾದರೂ ಐಎಎಸ್, ಐಪಿಎಸ್ ಪರೀಕ್ಷೆ ಬರೆದು ತೇರ್ಗಡೆಯಾಗುವ ಛಲ ಹೊಂದ ಬೇಕು. ಆ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.
ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ.ಪೈ, ಜಿಲ್ಲಾ ಕಾರ್ಯದರ್ಶಿ ಆನಂದ ಟಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಶಿಬಿರ ನಾಯಕಿ ಜ್ಯೋತಿ ಲಕ್ಷಣ್ ರಾವ್ ಉಪಸ್ಥಿತರಿದ್ದರು.