ಉಡುಪಿ: ವಿಕಲಚೇತನರ ಸಪ್ತಾಹ ಉದ್ಘಾಟನೆ
ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಮತ್ತು ವಿಕಲಚೇತನರ ಗ್ರಾಮೀಣ ಹಾಗೂ ನಗರ ಪುನರ್ವಸತಿ ಯೋಜನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಗರದ ಬನ್ನಂಜೆ ಬಾಲಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಅನುರಾಧ ಹಾದಿಮನೆ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಿವೃತ್ತ ಅಧಿಕಾರಿ ನಿರಂಜನ ಭಟ್, 21 ಬಗೆಯ ವಿಕಲತೆ ಬಗ್ಗೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್ ವಿಕಲತೆ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ತಾಲೂಕು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಧುಸೂದನ್ ರಾವ್, ಉಡುಪಿ ಮತ್ತು ಕಾಪು ತಾಲೂಕಿನ ಆಶಾ ಸುಗಮ ಕಾರರು, ಅಂಗನವಾಡಿ ಮೇಲ್ವಿಚಾರಕರು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅಧ್ಯಾಪಕರು, ಗ್ರಾಮೀಣ ಪುನರ್ವಸತಿ ಮತ್ತು ನಗರ ಪುನರ್ವಸತಿ ಕಾರ್ಯಕರ್ತರು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕಾರ್ಯ ಕರ್ತರು ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಸಂಘಟನೆಗಳೊಂದಿಗೆ ಗ್ರಾಮ ಪಂಚಾಯತ್ ಶಿರೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ, ತಾಲೂಕು ಪಂಚಾಯತ್ ಕಾರ್ಕಳ, ಜೂನಿಯರ್ ಕಾಲೇಜು ಕುಂದಾಪುರ, ಭಾರತೀಯ ರೆಡ್‌ಕ್ರಾಸ್ ಉಡುಪಿ ಇಲ್ಲಿ ಒಂದು ವಾರ ಕಾಲ ಕಾರ್ಯಕ್ರಮ ನಡೆಯಲಿದೆ.