ಉಡುಪಿ ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಡಿಸಿ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆಗಳನ್ನು ನೀಡಿದ್ದಾರೆ.
ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳಾದ ಭೂಮಿ, ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಸಾರ್ವಜನಿಕರಿಗೆ ಉದ್ಯೋಗ ದೊರೆಯುವಂತೆ ಕಾರ್ಯಪ್ರವೃತರಾಗಬೇಕು ಎಂದು ಅವರು ತಿಳಿಸಿದರು.
ಹೊಸ ಕೈಗಾರಿಕಾ ಪ್ರದೇಶ: ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕು ಗಳಲ್ಲಿ 155 ಎಕರೆಗೂ ಅಧಿಕ ಭೂಮಿಯನ್ನು ಗುರುತಿಸಲಾಗಿದೆ. ಈ ಭೂಮಿಗಳ ಭೂಸ್ವಾಧೀನ ಪ್ರಕ್ರಿಯೆ ಯನ್ನು ಒಂದು ತಿಂಗಳ ಒಳಗೆ ಪೂರ್ಣಗೊಳಿಸಿ ಭೂಮಿಯನ್ನು ಕೆಐಎಡಿಬಿಗೆ ಹಸ್ತಾಂತರಿಸಬೇಕು ಎಂದು ಅವರು ಸೂಚನೆ ನೀಡಿದರು.
ಬೆಳಪು ಕೈಗಾರಿಕಾ ಪ್ರದೇಶ ಸಂಪರ್ಕ ರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ಜಮೀನನ್ನು ವಿಶೇಷ ಭೂಸ್ವಾಧೀನ ಅಧಿಕಾರಿಗಳು ಪರಿಹಾರ ವಿತರಿಸಿ ಕೆಐಎಡಿಬಿಗೆ ಹಸ್ತಾಂರಿಸುವಂತೆ ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು. ಆದರೆ ಈವರೆಗೆ ಈ ಪ್ರಕ್ರಿಯೆ ನಡೆದಿಲ್ಲ ಎಂದು ಆಕ್ಷೇಪಣೆ ವ್ಯಕ್ತ ಪಡಿಸಿದ ಜಿಲ್ಲಾಧಿಕಾರಿ, ಒಂದು ತಿಂಗಳ ಒಳಗಾಗಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ಸಂಬಂಧಿತ ಅಧಿಕಾರಿಗೆ ನಿರ್ದೇಶನ ನೀಡಿದರು.
ಕಾರ್ಕಳದ ಮೀಯಾರು ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಗಳಲ್ಲಿ ಒಂದಾದ ನೀರಿನ ಸಮಸ್ಯೆ ಇದೆ. ಕೊಳವೆ ಬಾವಿಗಳಲ್ಲಿ ಸಹ ನಿರೀಕ್ಷಿತ ಪ್ರಮಾಣದಲ್ಲಿ ನೀರು ಲಭ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿದ್ದಲ್ಲಿ ನೀರಿನ ಕೊರತೆ ನೀಗಿಸಲು ಸಾಧ್ಯವಿದೆ. ಇದಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಮದ್ಯಮ ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಕೆಲವು ಕೈಗಾರಿಕಾ ಸಂಸ್ಥೆಗಳಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಶೇ.92ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಕೈಗಾರಿಕೆಗಳನ್ನು ಸ್ಥಾಪಿಸಲು ಬಂದ ಅರ್ಜಿಗಳನ್ನು ಬ್ಯಾಂಕ್ ಅಧಿಕಾರಿಗಳು ನಿಯಮಾನುಸಾರ ವಿಲೇವಾರಿ ಮಾಡಬೇಕು. ಹೊಸದಾಗಿ ಸಣ್ಣ ಕೇಂದ್ರ ಉದ್ಯೋಗವನ್ನು ಸೃಜನಿಸಲು ಹೆಚ್ಚಿನ ಪ್ರಚಾರ ನೀಡಬೇಕು ಎಂದರು.
ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆರ್.ಎಂ.ಸಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಮಾಲಕರುಗಳಿಗೆ ನೋಟಿಸ್ ನೀಡಬೇಕೆಂದು ಸೂಚನೆ ನೀಡಿದ ಅವರು, ಕೆಐಎಡಿಬಿಯಿಂದ ಹಂಚಿಕೆ ಮಾಡಿರುವ ಭೂಮಿಯಲ್ಲಿ ನಿಯಮಗಳ ಅನ್ವಯ ಇನ್ನೂ ಯೋಜನೆಗಳ ಅನುಷ್ಠಾನ ಆಗದಿದ್ದಲ್ಲಿ ಅಂತವರಿಗೂ ಸಹ ನೋಟೀಸ್ ನೀಡಬೇಕು ಎಂದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ಕೆ.ಐ.ಎ.ಡಿ.ಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.