ಜನತಾ ದರ್ಶನದಲ್ಲಿ ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು ಅವಕಾಶ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ
ಸೆ.25ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಸಭೆ
ಉಡುಪಿ, ಸೆ.22: ಸಾರ್ವಜನಿಕರ ಅಹವಾಲು ಸ್ವೀಕರಿಸುವ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಸೆ.25 ಸೋಮವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10:30ಕ್ಕೆ ನಡೆಯಲಿದೆ. ಆಸಕ್ತ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ ತಿಳಿಸಿದ್ದಾರೆ.
ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಿಂದ ವೀಡಿಯೋ ಕಾನ್ಫ್‌ರೆನ್ಸ್ ಮೂಲಕ ಜಿಲ್ಲೆಯ ಅಧಿಕಾರಿಗಳೊಂದಿಗೆ ನಡೆಸಿದ ಜನತಾ ದರ್ಶನದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಸರಕಾರದ ನಿರ್ದೇಶದಂತೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ ಕಾರ್ಯಕ್ರಮವನ್ನು ಸೆಪ್ಟಂಬರ್ 25ರಂದು ಹಮ್ಮಿಕೊಳ್ಳಲಾಗಿದೆ. ಅದರಂತೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸರಕಾರಿ ಕೆಲಸ ಸಂಬಂಧ ತಮ್ಮ ಅಹವಾಲುಗಳೇನಾದರೂ ಇದ್ದಲ್ಲಿ ಖುದ್ದಾಗಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಚಿವರ ಮುಂದೆ ಸಲ್ಲಿಸಬಹುದಾಗಿದೆ ಎಂದರು.
ಅಂದು ಬೆಳಗ್ಗೆ 10:30ಕ್ಕೆ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲು ಗಳನ್ನು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಸ್ವೀಕರಿಸಲಾಗುತ್ತದೆ. ನಂತರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸ್ಥಳದಲ್ಲಿಯೇ ವಿಲೇವಾರಿ ಮಾಡ ಬೇಕಾದ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಒಂದೊಮ್ಮೆ ಸರಕಾರದ ಗಮನ ಸೆಳೆಯಬೇಕಾದ ಅರ್ಜಿಗಳಿದ್ದಲ್ಲಿ ಸರಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಜಿಲ್ಲೆಯ ಸಾರ್ವಜನಿಕರಿಂದ ಬರುವ ಕುಂದುಕೊರತೆ ಅರ್ಜಿಗಳನ್ನು ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್) ಪೋರ್ಟಲ್‌ನಲ್ಲಿ ನೊಂದಣಿ ಮಾಡಬೇಕು. ನುರಿತ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಇದಕ್ಕಾಗಿ ನಿಯೋಜಿಸಬೇಕು ಎಂದರು.
ನೋಂದಣಿಯಾದ ಅರ್ಜಿಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥ ಪಡಿಸಲು ಸ್ಥಳದಲ್ಲಿಯೇ ಅಧಿಕಾರಿಗಳು ಸನ್ನದ್ಧರಾಗಿ ರಬೇಕು. ಹಲವು ದಿನಗಳಿಂದ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಗಮನ ಹರಿಸಬೇಕು ಎಂದರು.
ಜನತಾ ದರ್ಶನದ ಸಂದರ್ಭದಲ್ಲಿ ಅಧಿಕಾರಿಗಳು ಬೆಳಗ್ಗೆ 9:30ಕ್ಕೆ ಉಪಸ್ಥಿತರಿದ್ದು, ಯಾವುದೇ ಲೋಪಗಳಾಗದಂತೆ ಸಕಲ ಸಿದ್ಧತೆಗಳನ್ನು ಮಾಡಿ ಕೊಳ್ಳುವುದರೊಂದಿಗೆ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಭೆಗೆ ಅಗಮಿಸುವ ಸಾರ್ವಜನಿಕ ರಿಗೆ ಅಗತ್ಯ ಸೌಲಭ್ಯಗಳಾದ ಕುಡಿಯುವ ನೀರು, ಲಘು ಉಪಹಾರ ಸೇರಿದಂತೆ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು ಎಂದ ಅವರು, ಮುಂದೆ ಪ್ರತೀ ಹದಿನೈದು ದಿನಗಳಿಗೊಮ್ಮೆ ತಾಲೂಕುವಾರು ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗು ವುದು ಎಂದರು.
ಸಭೆಯಲ್ಲಿ ಕುಂದಾಪುರ ಉಪಭಾಗಾಧಿಕಾರಿ ರಶ್ಮಿ ಎಸ್, ವಿವಿಧ ತಾಲೂಕು ಗಳ ತಹಶೀಲ್ದಾರ್‌ಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.