ಸ್ಪೋಕನ್ ಇಂಗ್ಲಿಷ್ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ
ಉಡುಪಿ, ಜು.24: ಉಡುಪಿಯ ಶೆಫಿನ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ನಿರ್ದೇಶಕ ಮನೋಜ್ ಕಡಬ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಿ ಶಾಲೆಗಳಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಉಚಿತವಾಗಿ ಲಭ್ಯ ವಿದ್ದರೂ, ಆಂಗ್ಲ ಭಾಷೆಯ ಹಂಬಲದಿಂದ ಪೋಷಕರು ಮಕ್ಕಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಸೇರಿಸುತ್ತಿದ್ದಾರೆ ಇದರಿಂದ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಹಲವಾರು ಶಾಲೆಗಳು ಮುಚ್ಚಿವೆ. ಈ ಹಿನ್ನೆಲೆಯಲ್ಲಿ ಈ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ಬಾರಿ ಉಡುಪಿ ಜಿಲ್ಲೆಯ 200 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 100 ಶಾಲೆಗಳಿಗೆ ತಲುಪುವ ಗುರಿಯೊಂದಿಗೆ ಕಾರ್ಯಾರಂಭಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಗಳು ಸರಕಾರಿ ಹಾಗೂ ಅನುದಾನಿತ ಶಾಲೆಗಳ ಅತಿಥಿ/ಗೌರವ ಶಿಕ್ಷಕಿಯರಿಗೆ ಹಾಗೂ ಮಕ್ಕಳಿಗೆ ಉಚಿತ ತರಬೇತಿ ನೀಡುವ ಈ ಅಭಿಯಾನಕ್ಕೆ ಅನುಮತಿ ಯನ್ನು ನೀಡಿದ್ದಾರೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಆಡಳಿತ ವಿಶ್ವಸ್ಥೆ ಶೆರ್ಲಿ ಮನೋಜ್, ಆಂದೋಲನದ ಸದಸ್ಯರಾದ ಇಜಾಜ್ ಮನ್ನ, ಅಕ್ಷತಾ ಶೆಣೈ ಉಪಸ್ಥಿತರಿದ್ದರು.