ಮ್ಯಾನ್ಯುವಲ್ ಸ್ಕ್ಯಾವೆಂಜರ್ ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಎಚ್ಚರಿಕೆ
ಉಡುಪಿ: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಈಗಾಗಲೇ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಬಗ್ಗೆ ಸಮೀಕ್ಷೆ ನಡೆಸಿ, ಯಾವುದೇ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಇಲ್ಲವೆಂದು ಸರಕಾರಕ್ಕೆ ವರದಿ ನೀಡಲಾಗಿದೆ. ಈ ಸಮೀಕ್ಷೆ ನಂತರವು ಯಾರಾದರೂ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಾಗೂ ಸ್ಕ್ಯಾವೆಂಜಿಂಗ್ ಕೆಲಸವನ್ನು ಮಾಡಿಸುವವರ ವಿರುದ್ಧ ಸಹ ಎಂ.ಎಸ್. ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳನ್ನು ಸ್ವಚ್ಛಗೊಳಿಸಿ, ಅದನ್ನು ಸೂಕ್ತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಪಕ್ಕದ ಗ್ರಾಮ ಪಂಚಾಯತ್‌ಗಳಿಗೂ ಸಕ್ಕಿಂಗ್ ಯಂತ್ರದ ಸೇವೆ ಒದಗಿಸುವಂತೆ ಹಾಗೂ ವಿಲೇವಾರಿ ಅಗತ್ಯವಿರುವ ನಿರ್ವಹಣಾ ಘಟಕ ಗಳ ಸ್ಥಾಪನೆಯನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಪೌರ ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆಯನ್ನು ನಡೆಸುವಂತೆ ಮತ್ತು ಅವರಿಗೆ ಕರ್ತವ್ಯ ನಿರ್ವಹಣೆಗೆ ಅಗತ್ಯವಿರುವ ಉತ್ತಮ ಗುಣಮಟ್ಟದ ಸುರಕ್ಷತಾ ದಿರಿಸು ಮತ್ತು ಪರಿಕರಗಳನ್ನು ನೀಡಿ, ಅವರು ಅವುಗಳನ್ನು ಧರಿಸಿಕೊಂಡೇ ಕರ್ತವ್ಯ ನಿರ್ವಹಿಸುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪೌರ ಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರಿಗೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ದೊರೆಯುವ ಸೌಲಭ್ಯ ಗಳ ಬಗ್ಗೆ ಅರಿವು ಮೂಡಿಸಿ. ಅವರಿಂದ ಅರ್ಜಿಗಳನ್ನು ಸ್ವೀಕರಿಸಿ, ಸೌಲಭ್ಯಗಳನ್ನು ಮಂಜೂರು ಮಾಡುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಯೋಜನೆಗಳ ಸೌಲಭ್ಯವನ್ನು ಒದಗಿಸುವಂತೆ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ವಿವಿಧೆಡೆ ಆರಂಭಿಸಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕಗಳ ಸೌಲಭ್ಯವನ್ನು ಬಳಸಿಕೊಂಡು ಸಕ್ಕಿಂಗ್ ಯಂತ್ರಗಳ ಮೂಲಕ ಸಂಗ್ರಹಿಸುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಹಾಗೂ ಸಕ್ಕಿಂಗ್ ವಾಹನಗಳ ಸೇವೆ ಪಡೆಯಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಮತ್ತು ವಿಳಾಸದ ಬಗ್ಗೆ ಹೆಚ್ಚು ಪ್ರಚಾರ ಪಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.
"ಜಿಲ್ಲೆಯಲ್ಲಿ ಈಗಾಗಲೇ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಬಗ್ಗೆ ಸಮೀಕ್ಷೆ ನಡೆಸಲಾಗಿದ್ದು, ಯಾವುದೇ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಇಲ್ಲವೆಂದು ಸರಕಾರಕ್ಕೆ ವರದಿ ನೀಡಲಾಗಿದೆ. ಈ ಸಮೀಕ್ಷೆಯ ನಂತರವು ಯಾರಾದರೂ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಾಗೂ ಸ್ಕ್ಯಾವೆಂಜಿಂಗ್ ಕೆಲಸವನ್ನು ಮಾಡಿಸುವವರ ವಿರುದ್ಧ ಸಹ ಎಂ.ಎಸ್. ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು".
-ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ