ಉಡುಪಿ ಜಿಲ್ಲಾ ಮಟ್ಟದ ಪ್ರೌಢ, ಪ್ರಾಥಮಿಕ ಶಾಲಾ ಕಬಡ್ಡಿ: ಕಾರ್ಕಳ, ಕುಂದಾಪುರ, ಬ್ರಹ್ಮಾವರ, ಉಡುಪಿಗೆ ಅಗ್ರಪ್ರಶಸ್ತಿ
ಉಡುಪಿ, ಸೆ.13: ನಿಟ್ಟೂರು ಪ್ರೌಢಶಾಲೆಯ ಆಶ್ರಯದಲ್ಲಿ ಗುರುವಾರ ನಿಟ್ಟೂರು ಶಾಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟಗಳ 17ರ ವಯೋ ಮಿತಿಯ ಬಾಲಕರ ವಿಭಾಗದಲ್ಲಿ ಕಾರ್ಕಳ ವಲಯ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಂದಾಪುರ ವಲಯಗಳು ಅಗ್ರಸ್ಥಾನವನ್ನು ಗೆದ್ದುಕೊಂಡವು.
ಅದೇ ರೀತಿ 14 ವಯೋಮಿತಿಯ ಬಾಲಕರ ವಿಭಾಗದಲ್ಲಿ ಬ್ರಹ್ಮಾವರ ವಲಯ ಪ್ರಥಮ ಸ್ಥಾನ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಉಡುಪಿ ವಿಭಾಗ ಪ್ರಥಮ ಸ್ಥಾನವನ್ನು ಗೆದ್ದುಕೊಂಡಿತು.
ಸಂಜೆ ನಡೆದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ನಿಟ್ಟೂರು ಎಜುಕೇಶನಲ್ ಸೊಸೈಟಿಯ ಉಪಾಧ್ಯಕ್ಷ ಎಂ. ಗಂಗಾಧರ್ ರಾವ್, ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಸಿ.ಎ. ಪ್ರದೀಪ್ ಜೋಗಿ, ನಿಟ್ಟೂರು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ ಕರ್ನೇಲಿಯೊ, ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಸಹಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ಹಳೆವಿದ್ಯಾರ್ಥಿ, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಸದಸ್ಯ, ಉಡುಪಿ ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.ವಿಜಯಿ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಮುರಲಿ ಕಡೆಕಾರ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಎಂ. ವಂದಿಸಿದರು.
ಉದ್ಘಾಟನೆ: ಬೆಳಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಪಂದ್ಯಾಟಗಳಿಗೆ ಚಾಲನೆ ನೀಡಿದ್ದರು. ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಕೆ. ರಘುಪತಿ ಭಟ್, ವಿದ್ಯಾಂಗ ಉಪನಿರ್ದೇಶಕ ಗಣಪತಿ ಭಟ್, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಮುರಲಿ ಕಡೆಕಾರ್, ಉಪಾಧ್ಯಕ್ಷ ಎಸ್.ವಿ. ಭಟ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ಪಿ. ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.