ಉಡುಪಿ: ಅನರ್ಹ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ
ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರಕಾರದ ಅಥವಾ ಸರಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರಕಾರಿ ಪ್ರಾಯೋಜಿತ, ಸರಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ ನಿಗಮಗಳು/ ಸ್ವಾಯತ್ತತೆ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಹ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ 1.20 ಲಕ್ಷ ರೂ. ಗಳಿಗಿಂತಲೂ ಅಧಿಕ ವಾರ್ಷಿಕ ಆದಾಯ ಇರುವ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಪಡೆಯಲು (ಬಿ.ಪಿ.ಎಲ್) ಅರ್ಹವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.
ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವ ಎಲ್ಲಾ ಸಾರ್ವಜನಿಕರು ತಕ್ಷಣವೇ ತಾಲೂಕಿನ ತಹಶೀಲ್ದಾರರ ಕಛೇರಿಗೆ ಪಡಿತರ ಚೀಟಿಯನ್ನು ಒಪ್ಪಿಸಿ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ಪಡೆಯುವಂತೆ ಅವರು ಸೂಚಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಅನರ್ಹ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ತಪಾಸಣಾ ತಂಡವನ್ನು ರಚಿಸಲಾಗುತ್ತಿದ್ದು, ತಪಾಸಣಾ ಸಮಯದಲ್ಲಿ ಅನರ್ಹರು ಎಂದು ಕಂಡು ಬಂದಲ್ಲಿ ಅವರು ಪಡೆದಿರುವ ಆಹಾರಧಾನ್ಯಕ್ಕೆ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಸೂಲಾತಿ ಮಾಡುವುದರೊಂದಿಗೆ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಕರ್ನಾಟಕ ಅನಧಿಕೃತ ಪಡಿತರ ಚೀಟಿ (Prevention of Unauthorised Possesion of Rations Card) ಆದೇಶ 1977ರ ಅಡಿಯಲ್ಲಿ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಡ್ ಮುಟ್ಟುಗೋಲು
ಬಿಪಿಎಲ್ ಕಾರ್ಡ್ ಹೊಂದಿದ್ದು, ಕಳೆದ ಆರು ತಿಂಗಳಿನಿಂದ ಪಡಿತರವನ್ನು ಪಡೆದುಕೊಳ್ಳದೇ ಇರುವ ಎಲ್ಲರ ಕಾರ್ಡುಗಳನ್ನು ಮುಟ್ಟುಗೋಲು ಹಾಕಿಕೊಳ್ಳ ಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.